
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡಲು ಡಿಸಿಎಂಗೆ ಮನವಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 8- ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಸದಸ್ಯರನ್ನಾಗಿ ಮಾಡಿ ನಿಯೋಜಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಸಾಮಾಜಿಕ ನ್ಯಾಯ ವಿಭಾಗದ ಉಪಾಧ್ಯಕ್ಷ ಸಣ್ಣ ಮಾರೆಪ್ಪ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ಧರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಹಿಂಭಾಗದ ಭಾರತ್ ಜೋಡೋ ಸಭಾಂಗಣದಲ್ಲಿ `ಕಾರ್ಯಕರ್ತರೊಂದಿಗೆ ಉಪಮುಖ್ಯಮಂತ್ರಿ’ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ಸಣ್ಣ ಮಾರೆಪ್ಪ ಅವರು, ಕೆಪಿಸಿಸಿ ಬಳ್ಳಾರಿ ಘಟಕದ ಅಸಂಘಟಿತ ಕಾರ್ಮಿಕ ಸೆಲ್ ನಲ್ಲಿ ಉಪಾಧ್ಯಕ್ಷರಾಗಿ, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟ, ಕರ್ನಾಟಕ ರಾಜ್ಯ ಬುಡ್ಗ ಜಂಗಮ್ ಕ್ಷೇಮಾಭಿವೃದ್ಧಿ ಸಂಘ, ಮತ್ತು ಗುಡಾರ ಗುಡಿಸಗಲು ನಿವಾಸಿಗಳ ಕಲ್ಯಾಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕಾಗಿ ಹಗಲಿರುಗೂ ದುಡಿದು ಹಿಂದುಳಿದ, ದಲಿತ, ಅಲೆಮಾರಿ ಹಾಗೂ ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟು ಸಮುದಾಯಗಳ ಸಬಲೀಕರಣಕ್ಕೆ ಸ್ಪಂದಿಸುತ್ತಿದ್ದೇನೆ. ಪಕ್ಷವನ್ನು ಆ ಮೂಲಕ ಸಂಘಟಿಸುತ್ತಿದ್ದೇನೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದ ನನಗೆ ಅವಕಾಶ ಮಾಡಿಕೊಡಬೇಕೆಂದು ತಮ್ಮಲ್ಲಿ ನಿವೇದಿಸಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿದರು.
ಕೆಪಿಸಿಸಿ ಸಾಮಾಜಿಕ ನ್ಯಾಯ ವಿಭಾಗದ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಸಂಚರಿಸಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಶ್ರಮಿಸಿದ್ದೇವೆ. ರಾಜ್ಯದಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದೇವೆ. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ನನಗೆ ಟಿಕೆಟ್ ಲಭಿಸಲಿಲ್ಲ. ಆದರೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ರಾಜ್ಯದಾದ್ಯಂತ ಸಂಚರಿಸಿ ಅಲೆಮಾರಿ ನಿವಾಸಿಗಳಲ್ಲಿ ಕಾಂಗ್ರೆಸ್ ಪಕ್ಷದ ಗುರುತಿಗೆ ಮತ ಹಾಕುವಂತೆ ವಿನಂತಿಸಿದ್ದೇನೆ.
ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ಕೆ.ಎಂ.ಮೈತ್ರಿ ಅವರ ಮಾರ್ಗದರ್ಶನದಲ್ಲಿ ಅಲೆಮಾರಿ ಸಮುದಾಯಗಳ ಜನರಿಗೆ ಸರ್ಕಾರಿ ಸವಲತ್ತುಗಳನ್ನು ಕೊಡಿಸುವಲ್ಲಿ ಮತ್ತು ಅವರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸುತ್ತಿದ್ದೇನೆ. ಪಕ್ಷ ಬಲವರ್ಧನೆಗೆ ಇನ್ನಷ್ಟು ದುಡಿಯುವ ಹಂಬಲ ನನ್ನಲ್ಲಿದೆ. ಹೀಗಾಗಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷನನ್ನಾಗಿ ನಾಮ ನಿರ್ದೇಶನ ಸದಸ್ಯರನ್ನಾಗಿ ನಿಯೋಜಿಸಲು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಡಾ.ಆಂಜನೇಯ ಇನ್ನಿತರರು ಇದ್ದರು.