ಜಿಲ್ಲಾ ಟಾಸ್ಕ್ ಪೋರ್ಸ್ ಸಭೆ (3)

ಕುಡಿಯುವ ನೀರು ಪೂರೈಕೆ ಕ್ರಮಕ್ಕೆ ಹೆಚ್ಚಿನ ಗಮನ ಕೊಡಿ : ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 1- ಚುನಾವಣಾ ಕರ್ತವ್ಯದ ಜೊತೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಕ್ರಮಕ್ಕೆ ಹೆಚ್ಚಿನ ಗಮನ ಕೊಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಟಾಸ್ಕ್ ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೀವಜಲವು ಪ್ರತಿಯೊಬ್ಬರಿಗೂ ಪ್ರತಿದಿನ ಅತವಶ್ಯಕವಾಗಿ ಬೇಕಾಗುತ್ತದೆ. ದಿನ ಬೆಳಗಾದರೆ ನೀರಿನಿಂದಲೇ ಬದುಕು ಆರಂಭವಾಗುತ್ತದೆ. ಬೀದಿ ದೀಪ, ರಸ್ತೆ ಸೌಕರ್ಯದಷ್ಡೇ ನೀರು ಸಹ ಸಾರ್ವಜನಿಕರಿಗೆ ಅತ್ಯವಶ್ಯವಾಗಿ ಬೇಕಾಗುತ್ತದೆ. ಅಧಿಕಾರಿಗಳು ಇದನ್ನು ಅರಿಯಬೇಕು. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ದೂರು ಹೇಳಿದಾಗ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸ್ಪಂದನೆ ನೀಡಬೇಕು.

ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಲವಾರು ಸುತ್ತಿನಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಹಿಂದಿನ ಸಭೆಗಳಲ್ಲಿ ನಿರ್ದೇಶನ ನೀಡಿದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಬೇಸಿಗೆ ತಿಂಗಳುಗಳಾದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆ ಕಂಡುಬರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮಗಳ ಕುಡಿಯುವ ನೀರಿನ ಮೂಲಗಳಾದ ಬೋರ್‍ವೆಲ್‍ಗಳು, ಕಿರು ಕುಡಿಯುವ ನೀರಿನ ಘಟಕಗಳು ಸೇರಿದಂತೆ ಖಾಸಗಿ ಬೋರ್‍ವೆಲ್‍ಗಳ ಬಗ್ಗೆಯೂ ಮಾಹಿತಿ ತಯಾರಿಸಿ ಇಟ್ಟುಕೊಳ್ಳಬೇಕು. ಸರ್ಕಾರಿ ಬೋರ್‍ವೆಲ್‍ಗಳಲ್ಲಿ ಜಲಮೂಲ ಕಡಿಮೆಯಾದಲ್ಲಿ ಖಾಸಗಿ ವ್ಯಕ್ತಿಗಳಿಂದ ಕೊಳವೆಬಾವಿಗಳನ್ನು ಬಾಡಿಗೆ ಆಧಾರದಲ್ಲಿ ನೀರು ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಈ ರೀತಿ ಪಡೆದ ಬೋರ್‍ವೆಲ್‍ಗಳಿಗೆ ಬಾಡಿಗೆ ಹಣ ಪಾವತಿಸಲು ಜಿಲ್ಲಾಡಳಿತದಲ್ಲಿ ಸಾಕಷ್ಟು ಅನುದಾನ ಲಭ್ಯವಿದೆ. ಈ ಅನುದಾನದಿಂದ ಸಕಾಲದಲ್ಲಿ ಬಾಡಿಗೆ ಪಾವತಿಸಬಹುದಾಗಿದೆ. ಕೊಳವೆ ಬಾವಿಗಳಿಂದ ಬಾಡಿಗೆ ಪಡೆದ ಖಾಸಗಿ ವ್ಯಕ್ತಿಗಳಿಗೆ ನಿಯಮಿತವಾಗಿ ಪ್ರತಿ ತಿಂಗಳು ಹಣ ನೀಡಿದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವ್ಯಕ್ತಿಗಳು ನೀರು ನೀಡಲು ಮುಂದೆ ಬರುತ್ತಾರೆ. ಇದಲ್ಲದೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೂ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಹೊಸ ಬೋರ್ವೆಲ್‌ಗಳನ್ನು ಕೊರೆಯಿಸಲು ನಗರ ಸ್ಥಳೀಯ ಸಂಸ್ಥೆಗಳು, ಗ್ರಾಪಂ ಹಂತದಲ್ಲಿ ಕ್ರಮ ವಹಿಸಬೇಕು. ಬೋರ್ವೆಲ್‌ಗಳ ದುರಸ್ಥಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಜಿಲ್ಲಾ ಟಾಸ್ಕ್ ಪೋರ್ಸ್ ನಲ್ಲಿ ಅವಕಾಶವಿದ್ದು, ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ತಾ.ಪಂ ಇ.ಓ.ಗಳು ಹಾಗೂ ಕುಡಿಯು ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!