IMG20240316164712
ಲೋಕಸಭಾ ಚುನಾವಣೆ:
ನಿಯಮಪಾಲನೆಗೆ ಅಧಿಕಾರಿ, ಸಿಬ್ಬಂದಿಗೆ ಸೂಚನೆ
: ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ, 17- ವಿಜಯನಗರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯು ಅತ್ಯಂತ ಶಾಂತರೀತಿಯಿAದ ಮುಕ್ತವಾಗಿ, ನ್ಯಾಯಸಮ್ಮತವಾಗಿ ಹಾಗೂ ನಿಸ್ಪಕ್ಷಪಾತವಾಗಿ ಜರುಗುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯು ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮಾರ್ಚ 16ರಂದು ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಬಳಿಕ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಮಾರ್ಚ 16ರಂದು ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಹೊರಡಿಸಿದ ದಿನಾಂಕದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯು ರಾಜ್ಯಾದ್ಯಂತಜಾರಿಯಲ್ಲಿರುತ್ತದೆ. ಈ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕ್ರಿಯಾತ್ಮಕವಾಗಿ ಜಾರಿಯಾಗುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಾದ್ಯಂತ ಎಲ್ಲಾ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತ್ತಿನಲ್ಲಿರಿಸಲಾಗಿದೆ. ಇಂತಹ ವರ್ಗಾವಣೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯ, ತಾಲ್ಲೂಕಿನ ಹಾಗೂ ಎಲ್ಲಾ ಇಲಾಖಾ ಹಾಗೂ ಕಚೇರಿ ಮುಖ್ಯಸ್ಥರಿಗೆ ರಜೆ ನೀಡುವುದನ್ನು ನಿರ್ಭಂಧಿಸಲಾಗಿದೆ. ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲಾಧಿಕಾರಿಗಳ ಪರವಾನಿಗೆ ಇಲ್ಲದೇ ರಜೆ ಪಡೆಯುವುದಾಗಲಿ ಅಥವಾ ಕೇಂದ್ರಸ್ಥಾನ ಬಿಡಬಾರದೆಂದು ಸೂಚನೆ ನೀಡಿದರು.
ವಿಶೇಷವಾಗಿ ಚುನಾವಣಾ ಕಾರ್ಯಕ್ಕೆ ನಿಯುಕ್ತಿಗೊಳಿಸಲಾಗಿರುವಂತಹ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರರು ಹಾಗೂ ಇನ್ನಿತರೆ ಚುನಾವಣೆ ಕೆಲಸದಲ್ಲಿ ಕಾರ್ಯನಿರತರಾಗಿರುವಂತಹ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ಚುನಾವಣಾ ಕೆಲಸವನ್ನು ಹೊರತುಪಡಿಸಿ ಬೇರೆಯಾವುದೇ ಕಾರ್ಯಕ್ಕೆ ಕೇಂದ್ರಸ್ಥಾನ ಬಿಡಬಾರದೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಎಲ್ಲಾ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಹಾಗೂ ಇನ್ನಿತರೆ ಚುನಾಯಿತ ಸದಸ್ಯ ಮಂಡಳಿ ಸಮಾನ್ಯ ಸಭೆಗಳನ್ನು ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗು ನಿಷೇಧಿಸಲಾಗಿದೆ. ಈ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.
ಈ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತದಾರರ ಪ್ರಭಾವಕ್ಕೊಳಪಡುವ ಎಲ್ಲಾ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿನ ಭಿತ್ತಿ ಪತ್ರಗಳನ್ನು, ಕಟೌಟ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸಲು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಲೋಕಸಭಾ ಚುನಾವಣೆಯು ಅತ್ಯಂತ ಶಾಂತರೀತಿಯಿAದ ಮುಕ್ತವಾಗಿ, ನ್ಯಾಯಸಮ್ಮತವಾಗಿ ಹಾಗೂ ನಿಸ್ಪಕ್ಷಪಾತವಾಗಿ ಜರುಗುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಚೆಕ್‌ಪೋಸ್ಟಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!