IMG-20240626-WA0105

ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ : 249 ಅರ್ಜಿಗಳು ಸ್ವೀಕಾರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 27- ಜಿಲ್ಲಾಧಿಕಾರಿಗಳಾದ ನಲೀನ್ ಅತುಲ್ ಅವರು ಜೂನ್ 26ರಂದು ಕನಕಗಿರಿ ತಾಲೂಕಿಗೆ ಭೇಟಿ ನೀಡಿ ಜನಸ್ಪಂದನ ಕಾರ್ಯಕ್ರಮದಡಿ ಸಾರ್ವಜನಿಕರ ಅಹವಾಲು ಆಲಿಸಿದರು.

ನಗರದ ಎ.ಪಿ.ಎಂ.ಸಿ. ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಅತೀ ಹೆಚ್ಚು 90 ಅರ್ಜಿಗಳು ಸ್ವೀಕೃತವಾದವು. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆಗೆ 40, ನಗರಾಭಿವೃದ್ಧಿ ಇಲಾಖೆಗೆ 36, ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ತಲಾ 15, ಇಂಧನ ಇಲಾಖೆಗೆ 9, ಸಾರಿಗೆ ಇಲಾಖೆಗೆ 8, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 7, ಆರೊಗ್ಯ ಇಲಾಖೆಗೆ 5, ಆಹಾರ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಗೆ ತಲಾ 4, ಕೃಷಿ ಇಲಾಖೆ ಮತ್ತು ಪಶುಪಾಲನಾ ಇಲಾಖೆಗೆ ತಲಾ 3, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ತಲಾ 2, ಅರಣ್ಯ ಇಲಾಖೆ, ಉನ್ನತ ಶಿಕ್ಷಣ, ಪೊಲೀಸ್ ಇಲಾಖೆ, ತೋಟಗಾರಿಕಾ ಇಲಾಖೆ, ವಸತಿ ಇಲಾಖೆ ಮತ್ತು ಕೌಶಲಾಭಿವೃದ್ಧಿ ಇಲಾಖೆಗೆ ತಲಾ 1 ಸೇರಿ ಜನತಾ ದರ್ಶನದಲ್ಲಿ ಒಟ್ಟು 249 ಅರ್ಜಿಗಳು ಸ್ವೀಕೃತವಾದವು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೂ ಅಹವಾಲು ಆಲಿಸಿ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿದರು.
ಸ್ವೀಕೃತವಾದ ನಾನಾ ಅರ್ಜಿಗಳ ಬಗ್ಗೆ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇ ಮಾಡಿದರು.

ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಂಟಿಯಾಗಿ ತಾಲೂಕುಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿ ಸ್ವೀಕೃತವಾಗುವ ಮನವಿ ಕೋರಿಕೆಗಳ ಮೇಲೆ ಕ್ರಮಕೈಗೊಂಡು ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಮಾನ್ಯ ಸರ್ಕಾರದ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುತ್ತzದೆ. ಮೊದಲನೇಯದಾಗಿ ಕನಕಗಿರಿ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಕ್ರಮಕ್ಕಾಗಿ ಆಯಾ ಇಲಾಖೆಗಳಿಗೆ ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಅವರು ಮಾತನಾಡಿ, ಸಾರ್ವಜನಿಕರಿಗೆ ಸರ್ಕಾರದ ನಾನಾ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಗ್ರಾಮಮಟ್ಟದಲ್ಲಿ, ತಾಲೂಕುಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಜನೆಗಳ ಬಗ್ಗೆ ಪರಿಪೂರ್ಣ ಮಾಹಿತಿ ನೀಡಿದಲ್ಲಿ ಜನರಿಗೆ ಯೋಜನೆಗಳಿಂದ ಅನುಕೂಲವಾಗಿ ಜನರು ಅರ್ಜಿಗಳನ್ನು ಹಿಡಿದು ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ, ಸಾರ್ವಜನಿಕರು ಸರ್ಕಾರದ ಬೇರೆ ಬೇರೆ ಯೋಜನೆಗಳ ಅನುಕೂಲ ಪಡೆದುಕೊಳ್ಳುವುದರ ಜೊತೆಗೆ ತಮ್ಮ ಕರ್ತವ್ಯ ಏನು ಎಂಬುದನ್ನು ಅರಿತು ಶಾಂತಿ ಪಾಲನೆಗೆ ಸಹಕಾರ ನೀಡಬೇಕು. ಕಳ್ಳತನ, ಧರೋಡೆಯಂತಹ ಪ್ರಕರಣಗಳಿಗೆ ಅವಕಾಶ ಮಾಡಿಕೊಡಬಾರದು. ಸಾರ್ವಜನಿಕರಿಗೆ ಏನೇ ತೊಂದರೆಯಾದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಜಿಲ್ಲಾ ಪೊಲೀಸ್ ಇಲಾಖೆಯು ಸದಾಕಾಲ ಸಾರ್ವಜನಿಕರ ಜೊತೆಗೆ ಇರುತ್ತದೆ ಎಂದು ತಿಳಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ., ತಹಸೀಲ್ದಾರರಾದ ವಿಶ್ವನಾಥ ಮುರುಡಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

 

Leave a Reply

Your email address will not be published. Required fields are marked *

error: Content is protected !!