ದೌರ್ಜನ್ಯ ಪ್ರಕರಣಗಳಲ್ಲಿ ಸಂಸತ್ರಸ್ತರಿಗೆ ನಿಗದಿತ ಅವಧಿಯಲ್ಲಿ
ಪರಿಹಾರ ಒದಗಿಸಿ : ನಲಿನ್ ಅತುಲ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ, ಜಾತಿ ನಿಂದನೆ ಪ್ರಕರಣಗಳಲ್ಲಿ ಕಡ್ಡಾಯ ದೂರು ದಾಖಲಿಸಿ, ಸಂತ್ರಸ್ತರಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಯಾವುದೇ ಭಾಗದಲ್ಲಿ ಎಸ್ಸಿ, ಎಸ್ಟಿ ಸಮುದಾಯದವರ ಮೇಲೆ ದೌರ್ಜನ್ಯ ಆದಲ್ಲಿ ಕೂಡಲೇ ಈ ಸಂಬAಧವಾಗಿ ದೂರು ದಾಖಲಿಸಬೇಕು. ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ರಕ್ಷಣೆ ನೀಡುವುದರ ಜೊತೆಗೆ ಸಂತ್ರಸ್ತರಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ವಿತರಿಸಬೇಕು. ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಅನಗತ್ಯ ತೊಂದರೆ, ವಿಳಂಬ, ನಿರ್ಲಕ್ಷö್ಯ ತೋರುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಯಲ್ಲಿ ಅಗತ್ಯವಿರುವ ರಸ್ತೆ, ಕುಡಿಯುವ ನೀರು, ಶೌಚಾಲಯ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸಲು ಬಂದಾಗ ಯಾವುದೇ ಕಾರಣ ನೀಡದೆ ದೂರು ಸ್ವೀಕರಿಸಿ, ಪ್ರಕರಣ ದಾಖಲಿಸಬೇಕು. ಪೊಲೀಸ್ ಠಾಣೆಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ನಿಯಮಾನುಸಾರ ವಿಲೇ ಮಾಡಲು ಕ್ರಮ ವಹಿಸಬೇಕು. ಸಮುದಾಯದ ಭವನಗಳ ನಿರ್ಮಾಣ, ಅಂಗನವಾಡಿಗಳ ದುರಸ್ಥಿ ಸೇರಿದಂತೆ ಯಾವುದೇ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ ಅವರು ಮಾತನಾಡಿ, ಕಳೆದ ಸಭೆಯಲ್ಲಿ ಚರ್ಚಿಸಿದಂತೆ ಕೊಪ್ಪಳ ಕೇಂದ್ರ ಸ್ಥಾನದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ಸಂಬAಧಿಸಿದAತೆ ಹೆಚ್ಚುವರಿ ಕಾಮಗಾರಿಯ ಅಂದಾಜು ಪತ್ರಿಕೆಯು ಸಲ್ಲಿಕೆಯಾಗಿದ್ದು, ಕೇಂದ್ರ ಕಚೇರಿಗೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯ ಪ್ರಾರಂಭಿಸುವ ಸಲುವಾಗಿ ಮೂಲಭೂತ ಸೌಕರ್ಯಗಳು ಮತ್ತು ಕಟ್ಟಡವನ್ನು ಭವನಕ್ಕಾಗಿ ಉಪಯೋಗಿಸುವಾಗ ಅನುಕೂಲವಾಗುವಂತ ಸ್ನಾನಗೃಹಗಳ ನಿರ್ಮಾಣಕ್ಕಾಗಿ ಕೊಪ್ಪಳ ನಗರಸಭೆಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ನೀಡಿದ ಸುಚನೆಯಂತೆ ತಾಲ್ಲೂಕು ಕಚೇರಿ ಪ್ರಾರಂಭಿಸಲು ಇಲಾಖೆಯ ಆಯುಕ್ತರಿಗೆ ಅನುಮತಿಗಾಗಿ ಕೋರಲಾಗಿದೆ. ಸಮಿತಿ ಸದಸ್ಯರು ಪ್ರಸ್ತಾಪಿಸಿದ ವಿವಿಧ ವಿಷಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
2024ನೇ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 36 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಎಫ್.ಐ.ಆರ್ ಹಂತದಲ್ಲಿ 31 ಪ್ರಕರಣಗಳ ಹಾಗೂ ಚಾರ್ಜ್ಶೀಟ್ ಹಂತದಲ್ಲಿನ 22 ಪ್ರಕರಣಗಳು ಸೇರಿದಂತೆ ಒಟ್ಟು 53 ಪ್ರಕರಣಗಳಲ್ಲಿ ರೂ.49,25,000/- ಗಳ ಪರಿಹಾರಧನವನ್ನು ಮಂಜೂರಿಸಲಾಗಿದೆ. ಜಿಲ್ಲಾ ಹಂತದಲ್ಲಿ ಪರಿಹಾರ ಮಂಜೂರಾತಿಗಾಗಿ 2 ಪ್ರಕರಣಗಳು ಬಾಕಿ ಇವೆ. ಉಳಿದಂತೆ ಇದೇ ಕ್ಯಾಲೆಂಡರ್ ವರ್ಷದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಾರಂಭಿಕ ಶಿಲ್ಕು 242 ಹಾಗೂ 24 ಹೊಸ ಪ್ರಕರಣಗಳನ್ನು ಒಳಗೊಂಡಂತೆ ಒಟ್ಟು 266 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 12 ರಲ್ಲಿ ಬಿಡುಗಡೆ, 2 ರಲ್ಲಿ ಶಿಕ್ಷೆ, ಇತರೆ 2 ಸೇರಿದಂತೆ 16 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 250 ಪ್ರಕರಣಗಳು ಬಾಕಿ ಉಳಿದಿವೆ. ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಎಸ್ಪಿ ಹೇಮಂತಕುಮಾರ್, ಸಹಾಯಕ ಆಯುಕ್ತರಾದ ಕ್ಯಾ.ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ, ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಚಂದ್ರಪ್ಪ, ಚಂದಾಲಿAಗಪ್ಪ ಮಾದರ, ಸಿದ್ದು ಮಣ್ಣಿನವರ, ಮರಳಸಿದ್ದಪ್ಪ ಪೂಜಾರ, ಮಾರುತಿ ಚಾಮಲಾಪುರ, ಸುಂಕಪ್ಪ ಮಾಲಗತ್ತಿ, ಸೇರಿದಂತೆ ಇನ್ನಿತರ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
