ದ್ವಿತೀಯ ಪಿಯುಸಿ ಪರೀಕ್ಷೆ-3 : ನಿಷೇಧಾಜ್ಞೆ ಜಾರಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 22- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರಿಂದ ಕೊಪ್ಪಳ ಜಿಲ್ಲೆಯಲ್ಲಿ ಜೂನ್ 24ರಿಂದ ಜುಲೈ 05ರವರೆಗೆ ಜರುಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ: ದ್ವಿತೀಯ ಪಿಯುಸಿ ಪರೀಕ್ಷೆಗಳು ಕೊಪ್ಪಳದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಗಂಗಾವತಿಯ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಕುಷ್ಟಗಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಹಾಗೂ ಯಲಬುರ್ಗಾದ ಸರಕಾರಿ ಪದವಿ ಪೂರ್ವ ಕಾಲೇಜು ಒಳಗೊಂಡಂತೆ ಜಿಲ್ಲೆಯ ಒಟ್ಟು ನಾಲ್ಕು ಪರೀಕ್ಷಾ ಕ್ಷೇತ್ರಗಳಲ್ಲಿ ಜೂನ್ 24ರಿಂದ ಜುಲೈ 05ರವರೆಗೆ ಬೆಳಿಗ್ಗೆ 10ರಿಂದ ಸಾಯಂಕಾಲ 01.30ರವರೆಗೆ ನಡೆಯಲಿದೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.
ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
