ಬಳ್ಳಾರಿ ಲೋಕಸಭಾ ಕ್ಷೇತ್ರ ಚುನಾವಣೆ ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಬದ್ಧರಾಗಿ : ವೆಚ್ಚ ವೀಕ್ಷಕರ ಸೂಚನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 13- ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣೆ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರತಿಯೊಂದು ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ಖರ್ಚು ವೆಚ್ಚದ ಮೇಲೆ ನಿಗಾ ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರಾಗಿ ಆಗಮಿಸಿರುವ ಕೆ. ಕೃಷ್ಣಮೂರ್ತಿ ಹಾಗೂ ಕೆ. ಸುರೇಂದ್ರ ಪೌಲ್ ಅವರು ಹೇಳಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಚುನಾವಣೆ ವೆಚ್ಚ ನಿರ್ವಹಣೆ ಸಂಬಂಧ ಸಹಾಯಕ ಚುನಾವಣೆ ವೆಚ್ಚ ವೀಕ್ಷಕರು, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ, ಎಂಸಿಎಂಸಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧವಾಗಿ ಪ್ರತಿಯೊಂದು ಕಾರ್ಯಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗುತ್ತದೆ. ಚುನಾವಣೆಗೆ ಸಂಬಂಧಿಸಿದ ಪ್ರತಿಯೊಂದು ಅಂಶಗಳನ್ನು ಸೂಕ್ಷ್ಮವಾಗಿ ವೀಕ್ಷಣೆ ಮಾಡಲಾಗುವುದು. ಹೀಗಾಗಿ ಅಭ್ಯರ್ಥಿಗಳು ವ್ಯಯಿಸುವ ಚುನಾವಣೆ ಖರ್ಚು-ವೆಚ್ಚಗಳ ಮೇಲೂ ನಿಗಾ ವಹಿಸಬೇಕು ಎಂದು ತಿಳಿಸಿದರು.
ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ, ಸಂಡೂರು ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರಾದ ಕೆ. ಸುರೇಂದ್ರ ಪೌಲ್ ಅವರು ಮಾತನಾಡಿ, ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ನಿರ್ದೇಶನಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಹಾಯಕ ವೆಚ್ಚ ವೀಕ್ಷಕ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಮತ್ತು ವಿವಿಟಿ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ವಿಜಯನಗರ, ಕಂಪ್ಲಿ, ಬಳ್ಳಾರಿ ಗ್ರಾಮೀಣ ಮತ್ತು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವೆಚ್ಚ ವೀಕ್ಷಕರಾಗಿ ಆಗಮಿಸಿರುವ ಕೆ. ಕೃಷ್ಣಮೂರ್ತಿ ಅವರು ಮಾತನಾಡಿ, ಕಂಟ್ರೋಲ್ ರೂಂ ಗೆ ಸಲ್ಲಿಕೆಯಾಗುವ ದೂರುಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ, ತುರ್ತು ಕ್ರಮ ವಹಿಸಬೇಕು. ಈ ದಿಸೆಯಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
