1713181631235

ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ : ಎಂ.ಎಸ್.ದಿವಾಕರ

ಕರುನಾಡ ಬೆಳಗು ಸುದ್ದಿ

ವಿಜಯನಗರ, 16- ಅನಧಿಕೃತ ಕೊಳವೆಬಾವಿಗಳು ಹಾಗೂ ವಿಫಲ ಕೊಳವೆಬಾವಿಗಳನ್ನು ಮುಚ್ಚಲು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಳಕೆಯಾಗದೇ ಇರುವ ಕೊಳವೆಬಾವಿಗಳಿಂದ ಆಗುವ ಅಪಾಯ ತಡೆಗಟ್ಟುವ ಹಾಗೂ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಏಪ್ರಿಲ್ 15ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ವಿಫಲ ಕೊಳವೆಬಾವಿಗಳನ್ನು ವ್ಯವಸ್ಥಿತವಾಗಿ ಮುಚ್ಚಲು ನಿರ್ದೇಶನ ನೀಡಬೇಕು.

ವಿಫಲ ಕೊಳವೆಬಾವಿಗಳಿಂದ ಜನರಿಗೆ ತೊಂದರೆಯಾಗದAತೆ ಸಂಪೂರ್ಣವಾಗಿ ಮುಚ್ಚಲು ತಿಳಿಸಬೇಕು. ಜಿಲ್ಲೆಯಲ್ಲಿ ಇರುವ ಅನಧೀಕೃತ ಕೊಳವೆಬಾವಿಗಳನ್ನು ಮುಚ್ಚಿರುವುದನ್ನು ಪತ್ರದ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲು ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬೇಕು. ಅನಧೀಕೃತ ಕೊಳವೆಬಾವಿಗಳನ್ನು ಕೊರೆದರೆ ಅವರುಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ 525 ಕೊಳವೆಬಾವಿಗಳು, ಕೊಟ್ಟೂರು ತಾಲೂಕಿನಲ್ಲಿ 264, ಹರಪ್ಪನಹಳ್ಳಿ ತಾಲೂಕಿನಲ್ಲಿ 1149, ಹೂವಿನಹಡಗಲಿ ತಾಲೂಕಿನಲ್ಲಿ 507, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 294, ಹೊಸಪೇಟೆ ತಾಲೂಕಿನಲ್ಲಿ 292 ಕೊಳವೆಬಾವಿಗಳಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿನ ಕೆಲವು ವಿಫಲ ಕೊಳವೆಬಾವಿಗಳನ್ನು ಮುಚ್ಚಲು ಈಗಾಗಲೇ ಎಲ್ಲ ರೀತಿಯ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಬರ ನಿರ್ವಹಣೆ: ಹೊಸಪೇಟೆ ನಗರ ಸೇರಿದಂತೆ ಪಟ್ಟಣ ಪ್ರದೇಶ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬರ ನಿರ್ವಹಣೆಯ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

ವಿಜಯನಗರ ಜಿಲ್ಲೆಯು ಈಗಾಗಲೇ ಬರಪೀಡಿತ ಜಿಲ್ಲೆ ಎಂದು ಘೋಷಿತವಾಗಿದೆ. ಬೇಸಿಗೆಯ ಬಿಸಿಲು ದಿನೇದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲ ತಹಸೀಲ್ದಾರಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕೃಷಿ, ಪಶುಪಾಲನೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯ ಕೆಲವೆಡೆ ಮಳೆಯಾದ ಬಗ್ಗೆ ವರದಿಯಾಗಿದೆ. ಆದಾಗ್ಯೂ ಜಾನುವಾರುಗಳಿಗೆ ಮೇವು ಪೂರೈಕೆಯ ವಿಷಯದ ಬಗ್ಗೆ ನಿರ್ಲಕ್ಷö್ಯ ವಹಿಸಬಾರದು. ಯಾವುದೇ ತಾಲೂಕಿನಲ್ಲಿ ಮೇವಿನ ಕೊರತೆ ಕಂಡುಬಂದರೆ ಕೂಡಲೇ ಮೇವು ದಾಸ್ತಾನಿಗೆ ವ್ಯವಸ್ಥೆ ಮಾಡಬೇಕು. ನೀರಿನ ಅಬಾವ ಎದುರಾಗದಂತೆ ನೀರನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಜನಜಾಗೃತಿ ಮತ್ತು ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲೀಂ ಪಾಷಾ ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!