ಶುದ್ಧೀಕರಿಸಿದ ನೀರು ಪೂರೈಕೆಗೆ ಆದ್ಯತೆ ನೀಡಿ : ಡಾ.ಕೆ.ವಿ.ತ್ರಿಲೋಕ ಚಂದ್ರ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 22- ಜಿಲ್ಲೆಯ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕ್ಲೋರಿನೇಷನ್ನೊಂದಿಗೆ ಶುದ್ಧೀಕರಣಗೊಳಿಸಿದ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ ಅವರು ಎಲ್ಲಾ ತಾಲ್ಲೂಕಿನ ತಾಪಂ ಇಒಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (20 ಅಂಶ ಸೇರಿದಂತೆ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಿನ ಮೂಲಗಳ ಪರಿಶೀಲನೆ ನಡೆಸಿ : ಮುಂಗಾರು ಪೂರ್ವ ಮಳೆ ಆರಂಭಗೊಂಡಿರುವ ಹಿನ್ನಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಅರಿವು ಮೂಡಿಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಬಾರದು. ಇದರ ಬಗ್ಗೆ ಎಚ್ಚರ ವಹಿಸಬೇಕು. ನಿರಂತರವಾಗಿ ನೀರಿನ ಮೂಲಗಳನ್ನು ಪರಿಶೀಲನೆ ನಡೆಸುತ್ತಿರಬೇಕು. ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು ಎಂದು ನಿರ್ದೇಶನ ನೀಡಿದರು.
ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಿರಲಿ : ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ಉತ್ತಮವಾಗಿದೆ, ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ನಿಗಾವಹಿಸಬೇಕು. ತಪ್ಪದೇ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ತಿಳಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
