DSC_0064

ಲಾರ್ವಾಹಾರಿ ಮೀನುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಿಇಓ ಚಾಲನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 5- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ಇವರ ಸಹಯೋಗದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳ ಜೈವಿಕ ನಿಯಂತ್ರಣದ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾದ ಲಾರ್ವಾಹಾರಿ ಮೀನುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹಸಿರು ನಿಶಾನೆ ತೊರಿಸುವುದರ ಮೂಲಕ ಜುಲೈ 5ರಂದು ಚಾಲನೆ ನೀಡಿದರು.

ಈಡಿಸ್ ಲಾರ್ವಾ ಸಮೀಕ್ಷೆ ಮತ್ತು ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮಲನೆಗಾಗಿ ಪ್ರತಿ ಶುಕ್ರವಾರ ಡೆಂಗಿ ನಿಯಂತ್ರಣ ಅಭಿಯಾನದಡಿ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈಡಿಸ್ ಲಾರ್ವಾ ಸಮೀಕ್ಷೆ ಮತ್ತು ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮಲನೆಗಾಗಿ ಪ್ರತಿ ಶುಕ್ರವಾರ ಡೆಂಗಿ ನಿಯಂತ್ರಣ ಅಭಿಯಾನದಡಿ ನೀರಿನ ತೊಟ್ಟಿಯಲ್ಲಿ ಲಾರ್ವಾಹಾರಿ ಮೀನುಗಳ ಬಿಡುಗಡೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ಸಿಇಓ ಅವರು, ಡೆಂಗಿ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ರಾಜ್ಯ ಸರ್ಕಾರವು ಆರೋಗ್ಯ ಇಲಾಖೆ ಮೂಲಕ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ ಒಂದು ದಿನ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡಲು ಪ್ರತಿ ಶುಕ್ರವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಡೆಂಗಿ ಜ್ವರ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಹಾಗೂ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ಮಾತನಾಡಿ, ಡೆಂಗಿ ಜ್ವರಕ್ಕೆ ಪ್ರಮುಖ ಕಾರಣವಾದ ಈಡಿಸ್ ಸೊಳ್ಳೆಗಳ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿರುವ ದೊಡ್ಡ ದೋಣಿಗಳು, ಕಲ್ಲು ಕ್ವಾರಿಗಳು, ಹೊಂಡಗಳು ಮತ್ತು ಮಳೆ ನೀರು ಸಂಗ್ರಹವಾಗುವ ಇತರ ಸ್ಥಳಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತಿದೆ. ಈ ಲಾರ್ವಾಹಾರಿ ಮೀನುಗಳು ಈಡಿಸ್ ಸೊಳ್ಳೆಗಳ ಮೊಟ್ಟೆಗಳನ್ನು ತಿಂದು ಅವುಗಳ ಸಂತಾನೋತ್ಪತ್ತಿಯನ್ನು ನಾಶ ಮಾಡುತ್ತವೆ ಎಂದು ಹೇಳಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ವೆಂಕಟೇಶ ಕೆ. ಅವರು ಮಾತನಾಡಿ, ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟ್ ಸೊಳ್ಳೆಗಳಿಂದ ಡೆಂಗಿ ಜ್ವರ ಹರಡುತ್ತದೆ. ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಸಿಮೆಂಟ್ ತೊಟ್ಟಿ, ಡ್ರಂ, ಬ್ಯಾರೆಲ್, ಬಕೆಟ್ ಹಾಗೂ ಕೊಡಗಳಲ್ಲಿ ನೀರನ್ನು ಶೇಖರಿಸಿದ್ದಲ್ಲಿ ಅವುಗಳನ್ನು ಮುಚ್ಚಿಡಬೇಕು ಮತ್ತು ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವಿಂದ್ರನಾಥ ಎಂ.ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ, ಕೊಪ್ಪಳ ತಾಲ್ಲೂಕಾ ಆರೋಗ್ಯಾಧಿಕಾರಿಗಳಾದ ಡಾ.ರಾಮಾಂಜನೇಯ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶಿವಾನಂದ ವಿ ಪೂಜಾರ, ಜಿಲ್ಲಾ ಎನ್.ವಿ.ಬಿ.ಡಿ.ಸಿ.ಪಿ ಕಾರ್ಯಕ್ರಮ ಸಲಹೆಗರರಾದ ರಮೇಶ್ ಸೇರಿದಂತೆ ತಾಲ್ಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!