ಅಂಗನವಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಅಗತ್ಯ ಸೌಕರ್ಯ ಕಲ್ಪಿಸಿ : ಶಶಿಧರ ಕೋಸಂಬೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 13- ಜಿಲ್ಲೆಯ ವಿವಿಧೆಡೆಯಲ್ಲಿ ಪ್ರವಾಸ ಕೈಗೊಂಡ ವೇಳೆಯಲ್ಲಿ ಕೆಲವು ಅಂಗನವಾಡಿಗಳಲ್ಲಿ ಮತ್ತು ಇನ್ನೀತರ ಕಡೆಗಳಲ್ಲಿ ಮಕ್ಕಳಿಗೆ ಕಲ್ಪಿಸಬೇಕಾದ ಮೂಲ ಸೌಕರ್ಯದ ವಿಷಯದಲ್ಲಿ ಲೋಪದೋಷಗಳು ಕಂಡುಬಂದಿದ್ದು, ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಹಿಸಿ ಜವಾಬ್ದಾರಿಯುತವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗಿದಾರರೊಂದಿಗೆ ಜಿಲ್ಲಾಧಿಕಾರಿಗಳ ಅಡಿಟೋರಿಯಂ ಹಾಲ್ನಲ್ಲಿ ಜುಲೈ 12 ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲವು ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಉಂಟಾಗುತ್ತಿರುವ ವಿಳಂಬಕ್ಕೆ ಕಾರಣ ಏನು ಎಂಬುದರ ಬಗ್ಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಕೊಂಡ ಸದಸ್ಯರು, ಅಧಿಕಾರಿಗಳು ಕಾಲಕಾಲಕ್ಕೆ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದರು.
ರಾಜ್ಯದ್ಯಂತ ಎಲ್ಲ ಕಡೆಗಳಲ್ಲಿ ಡೆಂಗೆ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳು ಮಾರಕ ಡೆಂಗೆಗೆ ಬಲಿಯಾಗದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಶಾಲೆ, ಅಂಗನವಾಡಿ ಸೇರಿದಂತೆ ಎಲ್ಲಾ ಕಡೆಗೆ ಶುಚಿತ್ವದ ಬಗ್ಗೆ ಸಾಕಷ್ಟು ಗಮನ ಹರಿಸಬೇಕು. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ತಾಲೂಕು ಆರೋಗ್ಯ ಅಧಿಕಾರಿಗಳಿಂದ ಕಾಲಕಾಲಕ್ಕೆ ವರದಿ ಪಡೆದು ಸೂಕ್ತ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ವೇತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರಮತ್ತೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ ಉಣ್ಕಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
