17-3

ಅಕ್ಟೋಬರ್ 6 ರಂದು ಜಿಲ್ಲೆಗೆ  ಸಿಎಂ ಸಿದ್ದರಾಮಯ್ಯ

ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸುವಂತೆ ಸಚಿವ ತಂಗಡಗಿ ಸೂಚನೆ

ಕೊಪ್ಪಳ: ಸೆ,17 ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯ ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಸಚಿವರು, ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಗಬೇಕಿರುವ ಕೆಲಸ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. ಜೊತೆಗೆ ಜಿಲ್ಲೆಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ತಮ್ಮ ಮೇಲಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ಫಲಾನುಭವಿಗಳನ್ನು ಕರೆತರಲು ಬಸ್ ಗಳ ವ್ಯವಸ್ಥೆ ಆಗಬೇಕು. ಅದ್ದೂರಿ ಕಾರ್ಯಕ್ರಮ ಮಾಡುವ ಮೂಲಕ ಜಿಲ್ಲೆಯಿಂದ ಒಂದು ಒಳ್ಳೆಯ ಸಂದೇಶ ಹೋಗಬೇಕೆಂದು ಹೇಳಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಈ ಸಭೆ ಕರೆಯಲಾಗಿದೆ. ಮಳೆಯ ಕಾರಣ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಂದೂಡಲಾಗಿತ್ತು. ಇದು ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮ ಅಲ್ಲ. ಸರಕಾರಿ ಕಾರ್ಯಕ್ರಮ ಆಗಿರುವುದರಿಂದ ಅಧಿಕಾರಿಗಳು ಆಸಕ್ತಿವಹಿಸಿ ಕೆಲಸ ಮಾಡಬೇಕು. ಈ ಹಿಂದೆ 2017 ರಲ್ಲಿ ಒಳ್ಳೆಯ ಕಾರ್ಯಕ್ರಮ ಜಿಲ್ಲೆಯಲ್ಲಿ ಮಾಡಿದ್ದೆವು ಅದರಂತೆ ಈ ಕಾರ್ಯಕ್ರಮ ಆಗಬೇಕೆಂದರು.

ಸಭೆಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಂಸದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಶ್ರೀನಿವಾಸ ಗುಪ್ತಾ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!