IMG_20250707_182440

ಆಗಸ್ಟ್ 4ಕ್ಕೆ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ ಹಿನ್ನೆಲೆ ಸಚಿವ ಶಿವರಾಜ್ ತಂಗಡಗಿ ಪೂರ್ವಭಾವಿ ಸಭೆ

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ

ಕೊಪ್ಪಳ: ಜು, 07. – ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಆಗಸ್ಟ್ 4 ರಂದು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಪೂರ್ವಭಾವಿ

ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರದ ಸವಲತ್ತುಗಳನ್ನ ಪಡೆದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಇಲಾಖೆಯ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳು, ಜಿಲ್ಲೆಯ ವಿವಿಧ ತಾಲ್ಲೂಕಿನ ಪ್ರಜಾಸೌಧ, ಆಸ್ಪತ್ರೆ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಶಂಕು ಸ್ಥಾಪನೆಯನ್ನು ಮುಖ್ಯಮಂತ್ರಿ ಹಾಗೂ‌ ಉಪಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ.

ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳ 5 ವಿಧಾನಸಭಾ ಕ್ಷೇತ್ರಗಳಿಂದ ಒಂದು ಲಕ್ಷ ಫಲಾನುಭವಿಗಳನ್ನು ಕರೆತರಬೇಕು. ದೊಡ್ಡ ಕಾರ್ಯಕ್ರಮ ಆಗಿರುವುದರಿಂದ ಯಾವುದೇ ಸಮಸ್ಯೆಗಳಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಇತರೆ ಸಂಬಂಧಿಸಿದ ಅಧಿಕಾರಿಗಳು ಸಭೆ ನಡೆಸಿ ಫಲಾನುಭವಿಗಳ ಪಟ್ಟಿ ತಯಾರಿಸಿ ಅವರನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ನಿರ್ದೇಶನ ನೀಡಿದರು.

ಮಳೆಗಾಲ ಇರುವುದರಿಂದ ಮುಂಜಾಗ್ರತೆ ಕ್ರಮ ವಹಿಸಬೇಕು. ಮಳೆ ಬಂದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ಸ್ಥಳದಲ್ಲಿ ಜರ್ಮನ್ ಟೆಂಟ್ ಬಳಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ವಿವಿಧ ಇಲಾಖೆಯ ಫಲಾನುಭವಿಗಳು ಮತ್ತು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಬೇಕು. ಇದಕ್ಕಾಗಿ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು. ಆಯಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸಾರಿಗೆ ವ್ಯವಸ್ಥೆಗೆ ನಿಯೋಜನೆ ಮಾಡಬೇಕು. ವಿವಿಧ ಇಲಾಖೆಯ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಒಂದೇ ಸಲ ಮಾಡುವುದರಿಂದ ನಮ್ಮ ಜಿಲ್ಲೆಯಿಂದ ದೊಡ್ಡ ಸಂದೇಶ ಹೋದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!