2c136fae-be38-4577-97e1-318669006cc9

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಸಾಲ, ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 15- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33ರಷ್ಟು, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5ರ ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶ) ಅರ್ಹರಾಗಿರುತ್ತಾರೆ.

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ 3 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ 1 ಲಕ್ಷ ರೂ.ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮ ಅವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಸೌಲಭ್ಯಕ್ಕೆ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಅಭ್ಯರ್ಥಿಯು ಎಲ್ಲೊ ಬೊರ್ಡ್ (ಎಲೆಕ್ಟ್ರಿಕ್, ಸಿ.ಎನ್.ಜಿ) ತ್ರೀಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನವನ್ನು ಖರೀದಿಸಲು ನಿಗಮದಿಂದ ರೂ.1 ಲಕ್ಷದವರೆಗೆ ಸಾಲ ನೀಡಲಾಗುವುದು. ಬಾಕಿ ಮೊತ್ತವನ್ನು ಯಾವುದಾದರು ಬ್ಯಾಂಕ್ ಗಳಿಂದ ಸಾಲ ಪಡೆಯಬೇಕಾಗಿರುತ್ತದೆ. ವಾಹನವನ್ನು ಆಹಾರ ವಾಹಿನಿಯನ್ನಾಗಿ ಪರಿವರ್ತಿಸಿದ್ದಲ್ಲಿ ಮಾತ್ರ ಎರಡನೇ ಕಂತಿನ ಮೊತ್ತ ರೂ.1 ಲಕ್ಷಗಳ ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗೆ ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯಡಿ 2 ರಿಂದ 15 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ 2 ಲಕ್ಷ ರೂ.ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ 50,000 ರೂ.ಗಳ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ.ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಅರ್ಜಿ ಸಲ್ಲಿಸಲು ಅಗಷ್ಟ್ 31 ಕೊನೆಯ ದಿನವಾಗಿದ್ದು, ನಿಗಮದ ಸಹಾಯವಾಣಿ: 94484 51111 ಗೆ (ಬೆಳಿಗ್ಗೆ:10.00 ರಿಂದ ಸಂಜೆ:5.30 ವರೆಗೆ) ಸಂಪರ್ಕಿಸಬಹುದಾಗಿದೆ. ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ಜಿಲ್ಲಾ ಆಡಳಿತ ಭವನ ಜಿಲ್ಲಾ ಸಂಪಕೀರ್ಣ ಹೊಸಪೇಟೆ ರಸ್ತೆ ಕೊಪ್ಪಳ ಇಲ್ಲಿಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೆ ಅಥವಾ ಇತರ ವಿವರಗಳನ್ನು http://www.kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!