2c136fae-be38-4577-97e1-318669006cc9

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,20- ಜಿಲ್ಲೆಯಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 06 ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ನಡೆಸುತ್ತಿರುವ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ ಕೊಪ್ಪಳ-23, ಗಂಗಾವತಿ-14, ಕುಷ್ಟಗಿ-15, ಯಲಬುರ್ಗಾ-08, ಕುಕನೂರು-06, ಕಾರಟಗಿ-05 ಮತ್ತು ಕನಕಗಿರಿಯ 04 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ನಡೆಯಲಿವೆ. ಜಿಲ್ಲಾಧಿಕಾರಿಗಳ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.

200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!