
ನಗರದಲ್ಲಿ ಇಂದಿನಿಂದ 10 ದಿನಗಳ ಕಾಲ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚಾರ
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಿ: ವೈ.ಎಂ.ಸತೀಶ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೧೬- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಪಡೆದುಕೊಂಡು, ಅವುಗಳ ಲಾಭ ಪಡೆದುಕೊಳ್ಳಬೇಕು ಎಂದು ವಿಧಾನಪರಿಷತ್ ಶಾಸಕ ವೈ.ಎಂ.ಸತೀಶ್ ಅವರು ಹೇಳಿದರು.
ಅವರು ಕೆನರಾ ಬ್ಯಾಂಕ್ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಇವರ ಸಂಯುಕ್ತಾಶ್ರಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ನಗರದ ಕೆಇಬಿ ವೃತ್ತದ ಕೆಇಬಿ ಅತಿಥಿ ಗೃಹ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
2047ರ ವೇಳೆಗೆ ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಹೊಂದಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಎಲ್‍ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಪಿಎಂಜೆಜೆಬಿವೈ, ಪಿಎಂಎಸ್‍ಬಿವೈ, ಎಪಿವೈ, ಪಿಎಂ ಸ್ವಾನಿಧಿ, ಪಿಎಂ ವಿಶ್ವಕರ್ಮ ಮುದ್ರಾ ಯೋಜನೆ ಅಡಿ ನೋಂದಣಿಯಲ್ಲಿ ಜಿಲ್ಲೆಯ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆಯ ಸದಸ್ಯೆ ಸುರೇಖಾ ಮಲ್ಲನಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ನಾಗರೀಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ. ಕೇಂದ್ರ ಸರ್ಕಾದ ಯೋಜನೆಗಳು ಸಮಾಜದ ಕಟ್ಟ ಕಡೆಯ ನಾಗರೀಕರಿಗೂ ತಲುಪಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ. ಅರ್ಹರು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆದುಕೊಂಡು ವಿಕಸಿತರಾಗಬೇಕು ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸೋಮನಗೌಡ ಐನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಈಗಾಗಲೇ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಿದ್ದು, ಬಳ್ಳಾರಿ ನಗರದಲ್ಲಿ ಡಿ.16ರಿಂದ 26ರವರೆಗೆ ಸಂಚರಿಸಲಿದೆ ಎಂದು ತಿಳಿಸಿದರು.ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಸಂಘಟಿಸುವುದು, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಇದರ ಸೌಲಭ್ಯಗಳು ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಕೇಂದ್ರ ಸರ್ಕಾರದ ಮುದ್ರಾಯೋಜನೆ, ಜನಧನ್ ಯೋಜನೆ, ಪಿ.ಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಕೃಷಿ ಸನ್ಮಾನ್ ಯೋಜನೆ, ಅನ್ನ ಭಾಗ್ಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕೇಂದ್ರ ಸರ್ಕಾರದ 2024ರ ಕ್ಯಾಲೆಂಡರ್ ಗಣ್ಯರಿಂದ ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಕುರಿತ ಕಿರುಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.ಕೇಂದ್ರ ಸರ್ಕಾರದ ಪಿಎಂ ಸ್ವಾನಿಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆದುಕೊಂಡ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿ ಫಲಕಗಳನ್ನು ಪ್ರದರ್ಶಿಸಲಾಯಿತು ಮತ್ತು ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಎಸ್‍ಬಿಐ ಆರ್‍ಬಿಒ ಮಹೇಶ್ವರ ರಾವ್, ಎಸ್‍ಬಿಐ ಬಳ್ಳಾರಿ ಶಾಖೆಯ ಮುಖ್ಯಸ್ಥ ರಾಜೇಶ್ ನೀಲಾ ಶಂಕರ್, ಎಫ್‍ಎಲ್‍ಸಿ ದಿನೇಶ್ ಕುಮಾರ್, ಕೇಂದ್ರ ಸಂವಹನ ಇಲಾಖೆಯ ರಾಮಕೃಷ್ಣ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.