ಬೆಲೆ ಏರಿಕೆ ಬಡಜನರ ವಿರೋಧಿ ನೀತಿ
ವೀರೇಶ ಮಹಾಂತಯ್ಯನಮಠ ಆರೋಪ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 05- ರಾಜ್ಯ ಸರಕಾರ ಹಾಲಿನ ದರ ಹಾಗೂ ಬಸ್ ಸಾರಿಗೆ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ. ಸರ್ಕಾರದ ಈ ಜನವಿರೋಧಿ ನೀತಿಗಳನ್ನು ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಹಾಲಿನ ದರ ಮತ್ತು ಸಾರಿಗೆ ಪ್ರಯಾಣ ದರ ಹೆಚ್ಚಿಸಿರುವುದು ಜನರ ಬದುಕಿನ ಮೇಲೆ ನೇರ ಪರಿಣಾಮ ಬೀರಲಿದೆ. ದಿನನಿತ್ಯ ಹಾಲು ಖರೀದಿಸುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಾಗೂ ಉದ್ಯೋಗ, ಶಿಕ್ಷಣ ಮತ್ತಿತರ ಕೆಲಸಗಳಿಗಾಗಿ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಪ್ರಯಾಣಿಕರಿಗೆ ದರ ಏರಿಕೆ ಹೊರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಒಂದರ ಮೇಲೊಂದರಂತೆ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ.
ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಏನು..?
ಜನರ ಮೇಲೆ ಹೊರೆ ಹೇರುವ ಬದಲು ಮಧ್ಯಂತರ ಚುನಾವಣೆ ಎದುರಿಸಿ ಜನಾದೇಶ ಪಡೆಯಲಿ ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಜನವಿರೋಧಿ ದರ ಏರಿಕೆ ನೀತಿಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
