ಮಕ್ಕಳ ನ್ಯಾಯ ಕಾಯ್ದೆ: ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,18- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ ಅಡಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಮಕ್ಕಳ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸೆಂಸ್ಥೆಗಳು ನೆಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ತೆರದ ತಂಗುದಾಣಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲ ಕಾರ್ಮಿಕರಿಗಾಗಿ ನೆಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಅರ್ಹ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರುತುಪಡಿಸಿ ಎಲ್ಲಾ ರೀತಿಯ ಮಕ್ಕಳ ಪಾಲನಾ ಸಂಸ್ಥೆಗಳನ್ನು ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021ರಡಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಯನಿರ್ವಹಿಸಬೇಕು. ಇಲ್ಲಿಯವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರ್ಕಾರೇತರ ಸ್ವಯಂ ಸೇವಾ ಸೆಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಿ, ನೋಂದಣಿಗಾಗಿ ನಿಗದಿಪಡಿಸಿದ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸಬೇಕು.
ನೋಂದಣಿ ಮಾಡಿಸದ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಕ್ರಮ : ಒಂದು ವೇಳೆ ನೋಂದಣಿಯಾಗದೇ ಮಕ್ಕಳ ಪಾಲನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ, ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021ರಡಿ ಸೆಕ್ಷನ್ 42ರ ಅಡಿಯಲ್ಲಿ ಒಂದು ವರ್ಷದವರೆಗೆ ಜೈಲು ಶಿಕ್ಷೆ, ಒಂದು ಲಕ್ಷ ದಂಡ ಅಥವಾ ಈ ಎರಡು ಶಿಕ್ಷೆ ವಿಧಿಸಲಾಗುವುದು. ನೋಂದಾಯಿಸಲು ತಡ ಮಾಡಿದ್ದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾಧ ಎಂದು ಪರಿಗಣಿಸಲಾಗುವುದು ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರು ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನೆಡದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ್ದಲ್ಲಿ ಸಂಸ್ಥೆಯ ಮುಖ್ಯಸ್ಥರೇ ನೇರವಾಗಿ ಹೊಣೆಗಾರರಾಗಿರುತ್ತಾರೆ.
ಸಾರ್ವಜನಿಕರು ತಮ್ಮ ಅಕ್ಕ ಪಕ್ಕದಲ್ಲಿನ ಮಕ್ಕಳ ಪಾಲನಾ ಸಂಸ್ಥೆಗಳಿದ್ದಲ್ಲಿ, ಮಾಹಿತಿಯನ್ನು ವಿಳಾಸದೊಂದಿಗೆ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾಡಳಿತ ಭವನ ಕೊಪ್ಪಳ ದೂ.ಸಂ: 08539-225030 ಗೆ ತಿಳಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.
