
ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರ ಭೇಟಿ : ಪರಿಶೀಲನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 3- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಸೋಮವಾರ ಮತ ಎಣಿಕಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಮತ ಎಣಿಕೆಗಾಗಿ ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಚುನಾವಣಾ ಸಾಮಾನ್ಯ ವೀಕ್ಷಕರು ಮತ ಎಣಿಕಾ ಕೇಂದ್ರದ ಸಿದ್ಧತೆಗಳನ್ನು ವೀಕ್ಷಣೆ ಮಾಡಿ, ಜಿಲ್ಲಾಡಳಿತದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಮಾಧ್ಯಮ ಕೇಂದ್ರ, ಭದ್ರತಾ ಕೊಠಡಿಗಳು, ಸಿ.ಸಿ.ಟಿ.ವಿ ವ್ಯವಸ್ಥೆ, ಬ್ಯಾರಿಕೇಡಿಂಗ್ ವ್ಯವಸ್ಥೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ನೇಮಕ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು.
ಮತ ಎಣಿಕಾ ಕೇಂದ್ರದಲ್ಲಿ ಭದ್ರತೆಯ ದೃಷ್ಟಿಯಿಂದ ಸಿ.ಸಿ.ಟಿ.ವಿ ವ್ಯವಸ್ಥೆ, ಬ್ಯಾರಿಕೇಡಿಂಗ್ ವ್ಯವಸ್ಥೆ ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ದಿನದಂದು ವಾಹನ ದಟ್ಟಣೆ ತಡೆಯಲು ವಿವಿಧ ಕಡೆಗಳಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಸಿಬ್ಬಂದಿಗಳ, ಎಣಿಕೆ ಏಜೆಂಟರುಗಳ ತಪಾಸಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ವೀಕ್ಷಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರಿದ್ದರು.