
ಮತ ಚಲಾಯಿಸಿ ಪ್ರಜಾತಂತ್ರದ ಆಶಯ ಉಳಿಸಿ : ಷಡಕ್ಷರಯ್ಯ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 30- ಪ್ರಜಾಪ್ರಭುತ್ವದಲ್ಲಿ ಮತದಾನ ಅತ್ಯಂತ ಪವಿತ್ರವಾದದ್ದು, ಅದನ್ನು ಪ್ರತಿಯೊಬ್ಬರು ಚಲಾಯಿಸುವ ಮೂಲಕ ಪ್ರಜಾತಂತ್ರದ ಆಶಯ ಉಳಿಸಿ ಎಂದು ಸಂಡೂರು ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಇಒ ಷಡಕ್ಷರಯ್ಯ.ಎಚ್ ಅವರು ಕರೆ ನೀಡಿದರು.
ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ನಡೆ ಮತಗಟ್ಟೆ ಕಡೆ ಅಭಿಯಾನದಡಿ ಸಂಡೂರು ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆ ಅಂಗವಾಗಿ ದೇಶದ ಉತ್ತಮ ಭವಿಷ್ಯಕ್ಕಾಗಿ ಸಂವಿಧಾನ ನೀಡಿರುವ ಅಮೂಲ್ಯವಾದ ಮತದಾನದ ಹಕ್ಕನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿ, ಗಟ್ಟಿಗೊಳಿಸಲು ಪ್ರಜೆಗಳು ಮತದಾನದ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ ಪಾಲ್ಗೊಳ್ಳುವಿಕೆಯಿಂದ ನಿರಂತರವಾಗಿ ಇರಬೇಕು ಎಂದರು.
ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಜಾಗೃತಿ ಜಾಥಾವು ಸಂಡೂರು ತಾಲ್ಲೂಕಿನ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಹಾಗೂ ಎಲ್ಲಾ ಅಧಿಕಾರಿಗಳು ಒಳಗೊಂಡು ಬಸ್ ನಿಲ್ದಾಣದಿಂದ ಆರಂಭವಾಗಿ ಜೆಸ್ಕಾಂ ಕಚೇರಿ, ವಾಲ್ಮೀಕಿ ಭವನ, ತಾಲ್ಲೂಕು ಪಂಚಾಯತ್, ತಹಶೀಲ್ದಾರ್ ಕಚೇರಿ ಆವರಣಕ್ಕೆ ಅಂತ್ಯಗೊಂಡಿತು.
ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತದಾನದ ಜಾಗೃತಿ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ವೇಳೆ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಅಧ್ಯಯನ ವಿಭಾಗದ ಸಂಯೋಜಕರಾದ ಡಾ.ಮುಬಾರಕ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ರವಿ.ಬಿ, ಪುರಸಭೆ ಅಧಿಕಾರಿಗಳು, ಚುನಾವಣೆ ಸಿಬ್ಬಂದಿ ವರ್ಗ ಹಾಗೂ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.