
ಮನುಷ್ಯನು ಸ್ವಾವಲಂಬಿಯಾಗಲು ಶಿಕ್ಷಣ ಬಹುಮುಖ್ಯ : ನ್ಯಾ.ರಾಜೇಶ್ ಹೊಸಮನಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,29- ಮನುಷ್ಯನು ಸ್ವಾವಲಂಬಿಯಾಗಿ ಜೀವಿಸಲು ಶಿಕ್ಷಣ ಬಹುಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್.ಎನ್.ಹೊಸಮನಿ ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿಮ್ಸ್‍ನ ವೈದ್ಯ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶುದ್ಧ ಮನಸುಳ್ಳ ದೇವರ ರೂಪವೇ ಮಕ್ಕಳಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಶಿಕ್ಷಣ ಒದಗಿಸುವ ಕಾರ್ಯ ಮಾಡಬೇಕು ಎಂದು ಸಲಹೆ ಮಾಡಿದರು.
ಮಕ್ಕಳನ್ನು ಶಿಕ್ಷಣವಂತರಾಗಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್, ಎ.ಪಿ.ಜೆ ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದ, ಲಾಲ್ ಬಹದ್ದೂರ್ ಶಾಸ್ತ್ರಿ ಮುಂತಾದ ಮಹಾನ್ ಪುರುಷರ ಜೀವನ ಕಥೆಗಳನ್ನು ಮಕ್ಕಳಿಗೆ ಹೇಳಬೇಕು. ಮಕ್ಕಳಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಿ, ಸಾಮಾಜಿಕವಾಗಿ ಮಾನಸಿಕವಾಗಿ ಮಗುವನ್ನು ಸಧೃಡರನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್.ಕೆ.ಹೆಚ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಇಂತಹ ವೇದಿಕೆಗಳು ಸಹಕಾರಿಯಾಗಿದ್ದು, ಮಕ್ಕಳಲ್ಲಿರುವ ಕಲೆಯನ್ನು ಅನಾವರಣಗೊಳಿಸಬೇಕು ಎಂದು ಅಭಿಪ್ರಾಯ ಪಟ್ಟರು.
ಸಂಗೀತ, ನಾಟಕ ಪ್ರದರ್ಶನ, ಜನಪದ ನೃತ್ಯ, ಕಾವ್ಯ, ಕಥೆ, ಚಿತ್ರಕಥೆ, ಕ್ಲೇ ಮಾಡಲಿಂಗ್ ಸ್ಪರ್ಧೆಗಳಲ್ಲಿ ಮಕ್ಕಳು ಆಸಕ್ತಿಯಿಂದ ಭಾಗವಹಿಸಿ ಪ್ರದರ್ಶನ ನೀಡಿದರು.
ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮವು ಮನರಂಜನೆ ಭರಿತವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್‍ಷಾ ಅಲ್ತಾಪ್ ಅಹಮ್ಮದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಮಕೃಷ್ಣ ನಾಯಕ.ಎಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನಾ ಘಟಕದ ಯೋಜನಾಧಿಕಾರಿ ಮೌನೇಶ್, ಶಿಶು ಯೋಜನಾ ಅಧಿಕಾರಿ ನಾಗರಾಜ.ಪಿ, ನಾಗಪ್ಪ, ಪ್ರದೀಪ್ ಸೇರಿದಂತೆ ಇಲಾಖೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೋಷಕರು ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು.