
ಮಲೇರಿಯ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ : ಡಿಹೆಚ್‍ಓ ಡಾ.ವೈ.ರಮೇಶ್ ಬಾಬು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 25- ಸಾರ್ವಜನಿಕರು ಯಾವುದೇ ಜ್ವರವಿರಲಿ, ರಕ್ತಲೇಪನ ಪರೀಕ್ಷೆ ಮಾಡಿಸುವ ಮೂಲಕ ರೋಗ ತಡೆಗಟ್ಟಲು ಇಲಾಖೆಯೊಂದಿಗೆ ಕೈಜೋಡಿಸಲು ಹಾಗೂ ಶೂನ್ಯ ಮಲೇರಿಯ ಗುರಿಯನ್ನು ತಲುಪಲು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಮಲೇರಿಯಾ ದಿನಾಚರಣೆ’ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ ಆವರಣದಿಂದ ಏರ್ಪಡಿಸಿದ್ದ ಟ್ಯಾಬ್ಲೋ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಲೇರಿಯಾ ರೋಗಕ್ಕೆ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬಹುದು ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಲೇರಿಯಾ ಜ್ವರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಗಣನೀಯವಾಗಿ ಮಲೇರಿಯಾ ಪ್ರಕರಣಗಳು ಇಳಿಕೆಯಾಗಿದ್ದು, ಯಾರಿಗಾದರೂ ವಿಪರೀತ ಜ್ವರದೊಂದಿಗೆ ಮಲೇರಿಯಾ ರೋಗದ ಲಕ್ಷಣ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಲೇರಿಯಾ ಜ್ವರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಮಾತನಾಡಿ, ಮಲೇರಿಯಾ ಜ್ವರವು ಪ್ಲಾಸ್ಮೋಡಿಯಂ ಎಂಬ ಪರಾವಲಂಭಿ ಸೂಕ್ಷ್ಮಾಣುವಿನಿಂದ ಉಂಟಾಗುತ್ತದೆ ಹಾಗೂ ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವಂತ ರೋಗವಾಗಿದ್ದು, ಚಳಿ, ನಡುಕ, ಬಿಟ್ಟು ಬಿಟ್ಟು ಜ್ವರ ಬರುವುದು, ವಾಕರಿಕೆ, ಮೈ ಬೆವರುವುದು ಮಲೇರಿಯಾ ರೋಗ ಲಕ್ಷಣಗಳಾಗಿದ್ದು, ಈ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಒಳಪಡುವುದು ಸೂಕ್ತ ಎಂದು ಪ್ರಕಟಣೆಯಲ್ಲಿ ತಿಳಿಸಿದರು.