2c136fae-be38-4577-97e1-318669006cc9

18ರಂದು ವಿವಿಧ ಹುದ್ದೆಗಳ ತರಬೇತಿಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,17- ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಯು.ಪಿ.ಎಸ್., ಕೆಎಎಸ್, ಗ್ರೂಪ-ಸಿ, ಎಸ್.ಎಸ್.ಸಿ., ಬ್ಯಾಂಕಿಂಗ್, ಆರ್.ಆರ್.ಬಿ ಹುದ್ದೆಗಳ ತರಬೇತಿಯ ಪ್ರವೇಶ ಪರೀಕ್ಷೆಯು ಫೆಬ್ರವರಿ 18ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ವಿವಿಧ ಹುದ್ದೆಗಳ ತರಬೇತಿಯ ಪ್ರವೇಶ ಪರೀಕ್ಷೆಯು ಫೆಬ್ರವರಿ 18ರ ಬೆಳಿಗ್ಗೆ 10:30 ರಿಂದ ಸಾಯಂಕಾಲ 4:30 ಗಂಟೆಯವರೆಗೆ ಜಿಲ್ಲೆಯ ಗಂಗಾವತಿ ಮತ್ತು ಕೊಪ್ಪಳದ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ವಿವರ : ಗಂಗಾವತಿ ತಾಲ್ಲೂಕಿನ ಪಂಪಾನಗರದ ಹೆಚ್.ಆರ್.ಸರೋಜಮ್ಮ ಬಾಲಕಿಯರ ಪಿಯು ಕಾಲೇಜ್, ಕಂಪ್ಲಿ ರಸ್ತೆಯ ಶ್ರೀ ವಿದ್ಯಾನಿಕೇತನ ಪಿಯು ಕಾಲೇಜ್, ವಡ್ಡರಹಟ್ಟಿಯ ಶ್ರೀ ವೆಂಕಟೇಶ್ವರ ಪಿಯು ಕಾಲೇಜ್ ಹಾಗೂ ವಿರೂಪಾಪುರದ ಬೇಥಲ್ ಐ.ಎನ್.ಡಿ ಪಿಯು ಕಾಲೇಜ್ ಮತ್ತು ಕೊಪ್ಪಳದ ಸರಕಾರಿ ಬಾಲಕಿಯರ ಪಿಯು ಕಾಲೇಜ್, ಸರಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸೇರಿದಂತೆ ಈ ಎಲ್ಲಾ 7 ಪರೀಕ್ಷಾ ಕ್ಷೇದ್ರಗಳಲ್ಲಿ ಯು.ಪಿ.ಎಸ್., ಕೆಎಎಸ್, ಗ್ರೂಪ-ಸಿ, ಎಸ್.ಎಸ್.ಸಿ., ಬ್ಯಾಂಕಿಂಗ್, ಆರ್.ಆರ್.ಬಿಹುದ್ದೆಗಳ ತರಬೇತಿಯ ಪ್ರವೇಶ ಪರೀಕ್ಷೆ ಫೆ.18ರ ಬೆಳಿಗ್ಗೆ 10:30 ರಿಂದ ಸಾಯಂಕಾಲ 4:30 ಗಂಟೆಯವರೆಗೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!