
ಹಂಪಿಯಲ್ಲಿ ಯುವಜನ ಸೇವಾ ತರಬೇತಿ ಕೇಂದ್ರ
ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, -ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಸಂಘಗಳ ಒಕ್ಕೂಟ, ವಿವೇಕಾನಂದ ಯುವಕ ಸಂಘ ಹಾಗೂ ಸ್ಥಳೀಯ ಯುವಕ ಸಂಘಗಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್‌ಬಾಲ್ ಮೈದಾನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಸಬಲೀಕರಣ ಇಲಾಖೆಯಿಂದ ಯುವಜನರನ್ನು ಪ್ರೋತ್ಸಾಹಿಸಲು ಮತ್ತು ಅವರ ಅಧಿವೃದ್ಧಿಗಾಗಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಸ್ಥಾಪನೆಗೆ ಬೇಕಾದ 20 ಎಕರೆ ಜಾಗವನ್ನು ಹಂಪಿ ಅಥವಾ ಬಳ್ಳಾರಿ ಭಾಗದಲ್ಲಿ ಗುರುತಿಸಲಾಗುವುದು ಎಂದು ತಿಳಿಸಿದ ಸಚಿವರು, ಅದೇ ರೀತಿಯಾಗಿ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಹಮ್ಮಿಕೊಳ್ಳಲು ಇಚ್ಛಾಶಕ್ತಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ನುಡಿದರು.