15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ಡಿಸಿ
ಕರುನಾಎಡ ಬೆಳಗು ಸುದ್ದಿ
ವಿಜಯನಗರ, 7- ಸೆಪ್ಟೆಂಬರ್ 15 ರಂದು ನಿಗದಿಯಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ವಿಜಯನಗರ ಜಿಲ್ಲೆಯಲ್ಲಿ ನಡೆಸುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಜಯನಗರ ಜಿಲ್ಲೆಯಲ್ಲಿ ಈ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಬೇಕು. ಅಂದು ಕೊಪ್ಪಳ ಜಿಲ್ಲೆಯಿಂದ ಎನ್ಎಚ್-500 ರಾಷ್ಟ್ರೀಯ ಹೆದ್ದಾರಿ ಮೂಲಕ ವಿಜಯನಗರ ಜಿಲ್ಲೆಯ ಸರಹದ್ದು ಟಿ.ಬಿ.ಡ್ಯಾಮನ ಗಣೇಶ ಗಣೇಶ ದೇವಸ್ಥಾನದಿಂದ ಪ್ರವೇಶವಾಗಲಿದೆ. ಅಲ್ಲಿಂದ ಸಾಯಿಬಾಬಾ ಸರ್ಕಲ್, ಬಸವೇಶ್ವರ ಸರ್ಕಲ್, ಅಪ್ಪು ಸರ್ಕಲ್, ಪುಣ್ಯಮೂರ್ತಿ ಸರ್ಕಲ್, ಮಿರಲಂ ಟಾಕೀಸ್, ಬಳ್ಳಾರಿ ರೋಡ್ ಸರ್ಕಲ್, ಅಲ್ಲಿಂದ ಕಾಲುವೆವರೆಗೆ, ಕಾರಿಗನೂರು, ವಡ್ಡರಹಳ್ಳಿ, ಪಿ.ಕೆ.ಹಳ್ಳಿ, ಬಯಲುವದ್ದಿಗೇರಿ, ಧರ್ಮಸಾಗರ, ಗಾದಿಗನೂರು, ಭುವನಹಳ್ಳಿಯವರೆಗೆ ಮಾನವ ಸರಪಳಿಯನ್ನು ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ರಚಿಸಲಾಗುತ್ತದೆ ಎಂದು ತಿಳಿಸಿದರು.
ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಹೊಸಪೇಟೆ ನಗರ ಹಾಗೂ ಗ್ರಾಮೀಣ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಆಯಾ ಇಲಾಖೆಗಳಿಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಪ್ರತಿ 100 ಮೀಟರಗೆ ಒಬ್ಬರಂತೆ ಶಿಕ್ಷಕರು ಅಥವಾ ಸಿಬ್ಬಂದಿಯನ್ನು ಇನ್ಚಾರ್ಜ್ ಎಂದು ನಿಯೋಜಿಸಬೇಕು. ತಾಲೂಕುಮಟ್ಟದ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಸಭೆಗಳನ್ನು ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು. ವಿಜಯನಗರ ಜಿಲ್ಲೆಯಲ್ಲಿ ಅಂದು ಬೆಳಗ್ಗೆ ಸರಿಯಾದ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಬೇಕು. ಸುಮಾರು ೫೦ ಕಿ.ಮೀ ಮಾನವ ಸರಪಳಿ ನಿರ್ಮಿಸಲು ರೂಟ್ ಮ್ಯಾಪ್ ರಚಿಸಬೇಕು ಎಂದು ತಿಳಿಸಿದರು.
ಸೆಪ್ಟೆಂಬರ್ ೧೫ ಭಾನುವಾರ ಬರಲಿದೆ. ಆದ್ದರಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಖಾಸಗಿ ಶಾಲೆಗಳ ಬಸ್ಗಳನ್ನು ಬಳಸಿಕೊಳ್ಳಲು ಆರ್ಟಿಓ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಪ್ರತಿ ತಾಲೂಕಿಗೆ ೧ ಲಕ್ಷ ರೂ.ನಂತೆ ಎಲ್ಲ ತಾಲೂಕುಗಳಿಗೆ ಒಟ್ಟು ೬ ಲಕ್ಷ ರೂ.ಅನುದಾನ ನೀಡಲಾಗುತ್ತದೆ. ಈ ಅನುದಾನದಲ್ಲಿ ಡಿಸೆಲ್ ವೆಚ್ಚ ಭರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದರು.
ಸಾರ್ವಜನಿಕರಲ್ಲಿ ಮನವಿ : ಸೆ. 15 ರಂದು ವಿಜಯನಗರ ಜಿಲ್ಲೆಯಲ್ಲಿ ನಿಗದಿಯಾದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮವು ಸಂವಿಧಾನದ ಗೌರವ ಮತ್ತು ಘನತೆಯನ್ನು ಹೆಚ್ಚಿಸಲಿದೆ. ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಸ್ವ-ಇಚ್ಚೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಇದೆ ವೇಳೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಇ ಬಾಲಕೃಷ್ಣ, ಸಹಾಯಕ ಆಯುಕ್ತರಾದ ವಿವೇಕಾನಂದ ಪಿ., ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಾರದ ಶರಣಪ್ಪ ಮುದಗಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಪ್ರಭುಲಿಂಗ ಎಸ್.ತಳಿಕೆರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರಪ್ಪ ಕೆ.ಬಿ., ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಾಶುಮೊದ್ದೀನ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
