26ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ : ಶಾಂತಿಯುತ ಮತದಾನಕ್ಕಾಗಿ ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಮದ್ಯಪಾನ ನಿಷೇಧ

ಕರುನಾಡ ಬೆಳಗು ಸುದ್ದಿ

ವಿಜಯನಗರ, 22- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಮತದಾನ ದಿನದಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಮದ್ಯಪಾನ ನಿಷೇಧಿಸಿ, ಒಣ ದಿನಗಳೆಂದು ಘೋಷಿಸಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಚಿತ್ರದುರ್ಗ ಜಿಲ್ಲೆಯಲ್ಲಿ ಮೊದಲ ಹಂತದ ಮತದಾನವು ಏಪ್ರಿಲ್ 26 ರಂದು ನಡೆಯಲಿದ್ದು, ಚಿತ್ರದುರ್ಗ ಜಿಲ್ಲಾ ಗಡಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಬರುವುದರಿಂದ ಗಡಿಭಾಗದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಅಬಕಾರಿ ಅಕ್ರಮಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವಿಜಯನಗರ ಜಿಲ್ಲೆಯ ಗಡಿಭಾಗದ 5 ಕಿ.ಮೀ ವ್ಯಾಪ್ತಿಯಲ್ಲಿ ಏಪ್ರಿಲ್ 24ರ ಸಂಜೆ 6 ರಿಂದ ಏಪ್ರೀಲ್ 26ರ ಸಂಜೆ 6 ಗಂಟೆಯವರೆಗೆ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಮದ್ಯ ಮಾರಾಟ, ತಯಾರಿಕೆ, ಮದ್ಯ ಸಾಗಾಣಿಕೆ ಹಾಗೂ ಇತರೆ ಸ್ಥಳಗಳಾದ ಬಾರ್ & ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಒಣ ದಿನಗಳೆಂದು ಎಂದು ಘೋಷಿಸುವಂತೆ ವಿಜಯನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಕೋರಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆಯು ಮುಕ್ತವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಪ್ರಜಾ ಪ್ರಾತಿನಿಧಿ ಕಾಯ್ದೆ 1951 ರ ಸೆಕ್ಷನ್ 135(ಸಿ) ಹಾಗೂ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮ 1967 ರ ಅಧಿನಿಯಮ 10 (ಬಿ) ಪ್ರಕಾರ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಏಪ್ರೀಲ್ 24ರ ಸಂಜೆ 6 ಗಂಟೆಯಿಂದ ಏಪ್ರೀಲ್ 26ರ ಸಂಜೆ 6 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲೆಯ ಗಡಿಭಾಗದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ (ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟಂತೆ) ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಮದ್ಯ ಮಾರಾಟ, ತಯಾರಿಕೆ, ಮದ್ಯ ಸಾಗಾಣಿಕೆ ಹಾಗೂ ಇತರೆ ಸ್ಥಳಗಳಾದ ಬಾರ್ & ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಒಣ ದಿನಗಳೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಜಿಲ್ಲಾ ಪೋಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಉಪ ಆಯುಕ್ತರು ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!