5,8,9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಪ್ರಸ್ತುತ ಶೈಕ್ಷಣಿಕ ವರ್ಷ ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,13- ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡಿ 5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರವು ಆದೇಶ ಹೊರಡಿಸಿ ಪರೀಕ್ಷೆಗಳನ್ನು ಮಧ್ಯಂತರದಲ್ಲಿ ತಡೆ ಹಿಡಿದಿದ್ದು, ಪರೀಕ್ಷೆಗಳನ್ನು ಮುಂದೂಡಿದೆ.
ಒಂದೆಡೆ ಪರೀಕ್ಷೆ ರದ್ದು ಗೊಳಿಸಿ ಹಲವು ಆದೇಶಗಳನ್ನು ನ್ಯಾಯಾಲಯಗಳು ನೀಡುತ್ತಿದ್ದರೂ, ಪರೀಕ್ಷೆ ನಡೆಸಲೇ ಬೇಕು ಎಂದು ಸರ್ಕಾರ ಹಠಕ್ಕೆ ಬಿದ್ದಿರುವುದು ಏಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ ನಂತರವೂ, ಪರೀಕ್ಷೆ ರದ್ದುಗೊಳಿಸುವ ಬದಲು, ರಾಜ್ಯ ಸರ್ಕಾರ ಪರೀಕ್ಷೆಯನ್ನು ‘ಮುಂದೂಡಿದೆ’. ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸಿ, ಮುಂದಿನ ವರ್ಷ ಪ್ರಜಾತಾಂತ್ರಿಕ ಪ್ರಕ್ರಿಯೆ ಮೂಲಕ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುವ ಕುರಿತು ನಿರ್ಧಾರ ಕೈಗೊಳ್ಳಬೇಕೆಂದು ಎಐಡಿಎಸ್ಓ ಆಗ್ರಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ, ಉಪಾಧ್ಯಕ್ಷರು ಎಂ.ಶಾಂತಿ, ಉಮಾ, ಪ್ರಮೋದ್ ಮತ್ತು ಎಐಡಿಎಸ್ಓ ಸದಸ್ಯರು ಗಣೇಶ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
