ಜಿಲ್ಲಾ ನ್ಯಾಯಾಲಯ ಕನಸು ನನಸು ಮಾಡುವೆ : ಸಂಗಣ್ಣ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 27- ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವೆ. ನೀತಿ ಸಂಹಿತೆ ಮುಗಿದ ಬಳಿಕ ಅನುದಾನ ತಂದು ಶೀಘ್ರ ಕಾಮಗಾರಿಗೆ ವೇಗ ನೀಡಲಾಗುವುದು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಹೇಳಿದರು.
ನಗರದ ವಕೀಲರ ಸಂಘದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡುವುದು ನನ್ನ ಕನಸಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಜತೆ ನಿರಂತರವಾಗಿ ಬೆನ್ನು ಬಿದ್ದು ಕುಷ್ಟಗಿ ರಸ್ತೆಯಲ್ಲಿ ಜಾಗ ಮಂಜೂರು ಮಾಡಿಸಿದೆನು. ಭೂಮಿಪೂಜೆ ನೆರವೇರಿಸಲಾಗಿದೆ. ಸಂಕೀರ್ಣ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಲಾಗುವುದು ಎಂದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಭಾನುವಾರ ಆಗಮಿಸಲಿದ್ದು, ಸಿಎಂ ಗಮನಕ್ಕೆ ತರಲಾಗುವುದು. ಇನ್ನು ವಕೀಲರ ವಿವಿಧ ಬೇಡಿಕೆ ಗಳ ಬಗ್ಗೆಯೂ ಮನವರಿಕೆ ಮಾಡಲಾಗುವುದು ಎಂದು ವಕೀಲರಿಗೆ ಭರವಸೆ ನೀಡಿದರು.
ನ್ಯಾಯಾಲಯಗಳಲ್ಲಿನ ವ್ಯಾಜ್ಯಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕಾಂಗ್ರೆಸ್ ಸರ್ಕಾರವು ಗ್ರಾಮ ನ್ಯಾಯಾಲಯ ಆರಂಭಿಸಲು ಮುಂದಾಗಿದೆ. ಇದರಿಂದ ಸ್ಥಳೀಯ ಮಟ್ಟದ ಪ್ರಕರಣಗಳು ಶೀಘ್ರವೇ ಇತ್ಯರ್ಥ ವಾಗಲಿದೆ. ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕ ಸೇರಿ ಹಲವಾರು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ತಿಳಿಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸಾವಿರಾರು ವಕೀಲರಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
