ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ : ಸಚಿವ ಕೆ.ಜೆ.ಜಾರ್ಜ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 11- ಗ್ರಾಮ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ದೂರು ಬಂದಲ್ಲಿ ಕೂಡಲೇ ಸ್ಪಂದಿಸಿ, ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಗುರುವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲ, ಗಾಳಿ ಇತ್ಯಾದಿ ಸಂದರ್ಭಗಳಲ್ಲಿ ವಿದ್ಯುತ್ ಲೈನ್ ಹರಿದು ಬಿದ್ದಲ್ಲಿ, ಲೈನ್‍ಗಳ ನಿರ್ವಹಣೆ, ದುರಸ್ತಿ ಕಾರ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಉದಾಸೀನತೆ ಹಾಗೂ ನಿರ್ಲಕ್ಷ್ಯ ತೋರದೇ, ಜೀವಹಾನಿ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಾಮಾನ್ಯವಾಗಿ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ಲೈನ್ ತುಂಡಾದಲ್ಲಿ ರೈತರು ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸುತ್ತಾರೆ. ಆಗ ಅಧಿಕಾರಿಗಳು ಸ್ಪಂದಿಸಬೇಕು. ಅವುಗಳನ್ನು ತ್ವರಿತವಾಗಿ ಸರಿಪಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.
ವಿದ್ಯುತ್ ಸಮಸ್ಯೆ ಕುರಿತಾಗಿ ರೈತರು ಜೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಕರೆ ಸ್ವೀಕರಿಸುವುದಿಲ್ಲ ಎಂಬುದಾಗಿ ಶಾಸಕರುಗಳು ಗಮನಕ್ಕೆ ತಂದಿದ್ದು, ಇಂತಹ ವರದಿಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಎಚ್ಚರಿಸಿದರು.
