WhatsApp Image 2024-08-20 at 5.06.36 PM (1)

ಜಿಲ್ಲಾಡಳಿತದಿಂದ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ
ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜು ಅರಸು : ಮುಂಡರಗಿ ನಾಗರಾಜ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 20- ಡಿ.ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಸಾಮಾಜಿಕ ನ್ಯಾಯದ ಬಗ್ಗೆ ಆಳವಾದ ಜ್ಞಾನ ಹೊಂದಿದವರು. ಹಾಗಾಗಿ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಕರೆಯಲಾಗುತ್ತದೆ ಎಂಬುದಾಗಿ ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೆರವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆಯ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯದಲ್ಲಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದರು. ವಿದ್ಯಾರ್ಥಿಗಳು ಹಾಸ್ಟೆಲ್‌ಗಳ ಸದುಪಯೋಗಪಡೆದುಕೊಂಡು, ತಮ್ಮ ಅಮೂಲ್ಯ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಯುವ ಸಮೂಹಕ್ಕೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದನ್ನು ಪ್ರತಿಪಾದಿಸಿ, ರೈತರ ಆಶಾಕಿರಣರಾದವರು ಡಿ.ದೇವರಾಜು ಅರಸುರವರು ಎಂದು ಹೇಳಿದರು.

ರೈತಾಪಿ ಜನರ ನೋವು-ನಲಿವುಗಳನ್ನು ಬಲ್ಲವರಾಗಿದ್ದರು. ಕೃಷಿ ಕೆಲಸ ಮಾಡುತ್ತಿದ್ದ ಅವರು ರೈತರ ಕಷ್ಟಗಳನ್ನು ಮನಗಂಡಿದ್ದರು. ಹಾಗಾಗಿ ಭೂ ಸುಧಾರಣೆ ವಿಷಯದಲ್ಲಿ ಉಳುವವನೆ ಭೂಮಿ ಒಡೆಯ ಯೋಜನೆ ಜಾರಿಗೊಳಿಸಿದರು ಎಂದು ತಿಳಿಸಿದರು.

ಮಹನೀಯರ ಮಾರ್ಗದರ್ಶನದಲ್ಲಿ ಯುವಪೀಳಿಗೆಯು ಸಾಗಬೇಕು ಮತ್ತು ಅವರ ಕನಸುಗಳನ್ನು ನನಸಾಗಿಸಬೇಕು ಎಂದರು.

ಕೊಟ್ಟೂರು ಸ್ವಾಮಿ ಶಿಕ್ಷಣ ಮಹಾವಿದ್ಯಾಲಯ ಸಹ ಪ್ರಾಧ್ಯಾಪಕ ಡಾ.ಸುರೇಶ್‌ಬಾಬು ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಡಿ.ದೇವರಾಜು ಅರಸು ಅವರು, ಜೀತದಾಳು ಹಾಗೂ ಮಲ ಹೊರುವ ಪದ್ದತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಎಲ್ಲಾ ಬಡವರಿಗೆ ವಸತಿ ಸೌಲಭ್ಯ, ಶಿಕ್ಷಣದಲ್ಲಿ ಸಮಾನತೆ ಕಲ್ಪಿಸುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಿದವರು ಎಂದು ತಿಳಿಸಿದರು.

ಕೇಂದ್ರದ 20 ಅಂಶಗಳು ಸೇರಿದಂತೆ ನೂರಾರು ಕಾಯ್ದೆ, ಕಾನೂನುಗಳನ್ನು ಮಾಡಿ ಪ್ರಜಾಪ್ರಭುತ್ವದ ಮೌಲ್ಯವನ್ನು ಪ್ರತಿಪಾದಿಸಿದರು. ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ದೇವರಾಜ ಅರಸು ಅವರು ಕರ್ನಾಟಕದ ಜನತೆಯ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಅಪರೂಪದ ಜನಸೇವಕರಾಗಿ ಜನಮಾನಸದಲ್ಲಿ ಇಂದಿಗೂ ದೇವರಾಜ ಅರಸರು ಕಂಗೊಳಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ವಿಧಿ ಭೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಡಿ.ದೇವರಾಜು ಅರಸು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಲಯದ ಅತಿ ಹೆಚ್ಚು ಅಂಕ ಪಡೆದ ಹಾಗೂ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಸೇರಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಇಲಾಖೆಯ ನೌಕರರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!