7

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಶ್ರಮವಹಿಸಿ : ಎಸ್.ಆರ್.ಮೆಹರೋಜ್ ಖಾನ್

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 27- ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ತಿಳಿಸಿದರು.

ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ ಗೃಹಿಣಿಯರಿಗೆ, ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಯು ಪಕ್ಷಾತೀತವಾದ ಹಾಗೂ ಜನಪರವುಳ್ಳ ಸಾಮಾಜಿಕ ಕಾರ್ಯಕ್ರಮವಾಗಿದ್ದು, ಅರ್ಹ ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಇದರ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಾಮಾಜಿಕ ಕಳಕಳಿ ಹೊಂದಿರುವ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಾದ್ಯಂತ ಶೇ.೯೫ ರಷ್ಟು ಅನುಷ್ಠಾನಗೊಂಡಿದ್ದು, ಫಲಾನುಭವಿಗಳು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಎನ್ನುವುದು ಸಂತಸಕರ ವಿಷಯವಾಗಿದೆ. ಮುಂದಿನ ದಿನಮಾನಗಳಲ್ಲಿ ಶೇ.100 ರಷ್ಟು ಅನುಷ್ಠಾನಗೊಳಿಸಲು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಕೆಲ ತಾಂತ್ರಿಕ ಲೋಪದೋಷದಿಂದ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲು ವಿಳಂಬವಾಗುತ್ತಿದೆಯೇ ಹೊರತು ಯಾವುದೇ ಕಾರಣಕ್ಕೂ ನಿಲ್ಲಿಸಲಾಗುವುದಿಲ್ಲ. ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ ೫೩ ಸಾವಿರ ಕೋಟಿ ವಿನಿಯೋಗಿಸಲು ಅನುದಾನ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!