ಆದಿವಾಸಿ ಜನರ ಏಳಿಗೆಗೆ ಹೋರಾಡಿದ ಧೀಮಂತ ವ್ಯಕ್ತಿ ಬಿರ್ಸಾ ಮುಂಡಾ : ಡಿಸಿ ದಿವಾಕರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 15- ರಾಷ್ಟ್ರದ ಸ್ವಾತಂತ್ರ‍್ಯಕ್ಕಾಗಿ ಹಾಗೂ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಹೋರಾಡಿದ ಧೀಮಂತ ವ್ಯಕ್ತಿ ಭಗವಾನ್ ಬಿರ್ಸಾ ಮುಂಡಾ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಹೇಳಿದರು.
ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ನಡೆದ ಜನಜಾತಿಯ ಗೌರವ್ ದಿವಾಸ್ ಆಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಆದಿವಾಸಿ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆ ಅಂಗವಾಗಿ ಜನಜಾತಿಯ ಗೌರವ್ ದಿವಸ್ ಎಂದು ಪ್ರತಿ ವರ್ಷ ನವಂಬರ್ ೧೫ ರಂದು ಆಚರಿಸಲಾಗುತ್ತದೆ. ಜನಜಾತಿಯ ಗೌರವ್ ದಿವಸದಂದು ದೇಶದ ಜನಜಾತಿಯ ಜನರ ಸಾಧನೆಗಳು, ಸಂಸ್ಕೃತಿಗಳು, ಐತಿಹ್ಯಗಳು ಮತ್ತು ಭಾರತೀಯ ಸ್ವಾತಂತ್ರö್ಯ ಹೋರಾಟದಲ್ಲಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ ಎಂದರು.
ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಅಡಿಯಲ್ಲಿ ಕೇಂದ್ರ ಸರ್ಕಾರವು ಆದಿವಾಸಿಗಳ ಸಬಲೀಕರಣಕ್ಕಾಗಿ ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಹಾಗೂ ಧರ್ತಿ ಆಬಾ ಜನಜಾತಿಯ ಉತ್ಕರ್ಷ ಅಭಿಯಾನ ಕಾರ್ಯಕ್ರಮಗಳ ಅಡಿಯಲ್ಲಿ ಆದಿವಾಸಿಗಳಿಗೆ ಜಲಜೀವನ್ ಮಿಷನ್, ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನ ಮಂತ್ರಿ ಆರೋಗ್ಯ ಯೋಜನೆ ಸೇರಿದಂತೆ ಹಲವು ಯೋಜನೆಗಳ ಸೌಲಭ್ಯ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ನಿಯಾಜ್ ಹಾಗೂ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾರದ ಮತ್ತು ತಂಡದವರು ನೆರವೇರಿಸಿದರು. ಯಮುನಾ ಕುಲಕರ್ಣಿ ನಿರೂಪಿಸಿದರು.
