ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,9- ಸಂವಿಧಾನ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಹೋಬಳಿಯ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಫೆಬ್ರವರಿ 9ರಂದು ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವು ನಡೆಯಿತು.
ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ‘ಸಂವಿಧಾನ ಜಾಗೃತಿ ಜಾಥಾ’ ಮೆರವಣಿಗೆಗೆ ಚಾಲನೆಯನ್ನು ನೀಡಿ, ಸುಮಾರು ಒಂದು ಕೀ.ಮೀ ವರೆಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಇದೆ ವೇಳೆ ಜಿಲ್ಲಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಸಂವಿಧಾನ ಮಹತ್ವವನ್ನು ಸಾರುವ ಪೀಠಿಕೆಯನ್ನು ಬೋಧಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ಮೆರವಣಿಗೆ ಮೂಲಕ ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರು ಅವಳವಡಿಸಿಕೊಂಡು ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಜೊತೆಗೆ ಸರ್ಕಾರದಿಂದ ನೀಡುವ ಉಚಿತ ಯೋಜನೆಗಳಾದ ಪಡಿತರ ಅಕ್ಕಿ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆಯನ್ನು ಹೇಳುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳು ಸಹಿತ ಈ ಎಲ್ಲಾ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಎಂದು ಹೇಳಿದರು.
ಮೆರವಣಿಗೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಸೇರಿದಂತೆ 31 ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಹಾಗೂ ದಲಿತ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಫೆ.9ರಂದು ‘ಸಂವಿಧಾನ ಜಾಗೃತಿ ಜಾಥಾ’ ಮೆರವಣಿಗೆಯು ತಾಳಕೇರಿ ಗ್ರಾಮದಿಂದ ಪ್ರಾರಂಭವಾಗಿ ಬೋದೂರು, ಮಾಟಲದಿನ್ನಿ, ಹಿರೇವಂಕಲಕುಂಟಾ ಮಾರ್ಗದ ಮೂಲಕ ಹಿರೇಅರಳಿಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದೆ.
