2c136fae-be38-4577-97e1-318669006cc9

18ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,17- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ವಸತಿ ಶಾಲೆಗಳಲ್ಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯು ಫೆಬ್ರವರಿ 18ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ವಸತಿ ಶಾಲೆಗಳಲ್ಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯು ಫೆಬ್ರವರಿ 18ರ ಬೆಳಿಗ್ಗೆ 11 ರಿಂದ ಸಾಯಂಕಾಲ 1 ಗಂಟೆಯವರೆಗೆ ಜಿಲ್ಲೆಯ ಗಂಗಾವತಿ ತಾಲೂಕಿನ 2 ಪರೀಕ್ಷಾ ಕೇಂದ್ರ, ಕನಕಗಿರಿ 2 ಪರೀಕ್ಷಾ ಕೇಂದ್ರ, ಕಾರಟಗಿ 2 ಪರೀಕ್ಷಾ ಕೇಂದ್ರ, ಕೊಪ್ಪಳ 9 ಪರೀಕ್ಷಾ ಕೇಂದ್ರ, ಕುಕನೂರು 2 ಪರೀಕ್ಷಾ ಕೇಂದ್ರ, ಕುಷ್ಟಗಿ 13 ಪರೀಕ್ಷಾ ಕೇಂದ್ರ, ಯಲಬುರ್ಗಾ ತಾಲೂಕಿನ 7 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!