ಸ್ಕ್ಯಾನಿಂಗ್ ಸೆಂಟರ್ಗಳ ದಾಖಲಾತಿ ನಿರ್ವಹಣೆ ಕಡ್ಡಾಯ : ಡಾ ಲಿಂಗರಾಜು
ಕರುನಾಡ ಬೆಳಗು ಸುದ್ದಿ
ಕೊಪ್ಪಳ,22- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಫಾರಂ-ಎಫ್ ಸೇರಿದಂತೆ ಎಲ್ಲ ಅಗತ್ಯ ದಾಖಲಾತಿಗಳ ನಿರ್ವಹಣೆ ಕಡ್ಡಾಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಲಿಂಗರಾಜು ಟಿ. ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಎಂ.ಟಿ.ಪಿ ಕಾಯ್ದೆಯ ಅಡಿ ಬರುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು ಹಾಗೂ ನೋಂದಣಿ ಅವಧಿ ಪೂರ್ಣಗೊಳ್ಳುವುದಕ್ಕಿಂತ ಮೂರು ತಿಂಗಳ ಮುಂಚೆ ಅರ್ಜಿ ಸಲ್ಲಿಸಿ ನವೀಕರಣ ಮಾಡಿಕೊಳ್ಳಬೇಕು.
ಸ್ಕ್ಯಾನಿಂಗ್ ಕುರಿತಾದ ಮಾರ್ಗಸೂಚಿಗಳನ್ನು ಪಾಲಿಸಿ ನಿಗದಿತ ನಮೂನೆಗಳನ್ನು ನಿರ್ವಹಿಸಬೇಕು. ನೋಂದಣಿ, ಪರವಾನಗಿ ನವೀಕರಣವಿಲ್ಲದ ಆರೋಗ್ಯ ಸಂಸ್ಥೆಗಳ ಮೇಲೆ ಹಾಗೂ ನಿಗದಿತ ನಿಯಮ ಪಾಲನೆ ಹಾಗೂ ದಾಖಲಾತಿಗಳನ್ನು ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಕಾಯ್ದೆಯಡಿ ಅವಕಾಶವಿರುತ್ತದೆ.
ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಿಲ್ಲೆಯಲ್ಲಿ ಸಮಪರ್ಕವಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳು ಕಾಯ್ದೆ ಪಾಲನೆ ಜೊತೆಗೆ ನಿಯಮಾನುಸಾರ ನೋಂದಣಿ, ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವೀಂದ್ರನಾಥ್ ಎಂ.ಎಚ್ ಅವರು ಮಾತನಾಡಿ, ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಕಾರಾಗೃಹ ಶಿಕ್ಷೆ ಸಹಿತ ದಂಡವನ್ನು ವಿಧಿಸಲಾಗುವುದು.
ಮೊದಲ ಅಪರಾಧಕ್ಕೆ 5 ವರ್ಷ ವೈದ್ಯಕೀಯ ಪರವಾನಿಗೆಯನ್ನು ರದ್ದುಪಡಿಸುವುದು. ನಂತರದ ಅಪರಾದಕ್ಕೆ ಸಂಬಂಧಿಸಿದ ವೈದ್ಯರ ವೈದ್ಯಕೀಯ ಪರವಾನಿಗೆಯನ್ನು ರಾಜ್ಯ ವೈದ್ಯಕೀಯ ಮಂಡಳಿಯಿಂದ ಶಾಶ್ವತವಾಗಿ ತೆಗೆದು ಹಾಕಿ, ವೈದ್ಯಕೀಯ ವೃತ್ತಿ ನಡೆಸಲು ಆಜೀವ ನಿಷೇಧ ಹೇರಲಾಗುವುದು. ಒಂದು ವೇಳೆ ಸ್ವತಃ ಮಹಿಳೆ, ಆಕೆಯ ಪತಿ ಅಥವಾ ಸಂಬಂಧಿಕರು ಭ್ರೂಣ ಲಿಂಗ ಪತ್ತೆಗೆ ಯತ್ನಿಸಿ, ವೈದ್ಯರಿಗೆ ಒತ್ತಡ ಹೇರಿದಲ್ಲಿ ಅವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.50 ಸಾವಿರದಿಂದ 1 ಲಕ್ಷದವರೆಗೆ ದಂಡವನ್ನು ವಿಧಿಸಲು ಅವಕಾಶವಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಹೊಸ ಅರ್ಜಿಗಳಿಗೆ ಅನುಮತಿ ಕುರಿತಂತೆ ಚರ್ಚಿಸಲಾಯಿತು.
ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಸರೋಜಾ ಬಾಕ್ಳೆ, ವೈದ್ಯರಾದ ಡಾ.ಗಿರೀಶ್ ಹಾಗೂ ಡಾ.ಶ್ರೀನಿವಾಸ ಹ್ಯಾಟಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
