ಕ್ಯಾಂಡಲ್ ಲೈಟ್ ಮೆರವಣಿಗೆ (4)

ಮತದಾನ ಮಾಡಲು ನಿಷ್ಕಾಳಜಿ ತೋರದಿರಿ : ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 17- ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯಿಂದ ಕೊಪ್ಪಳ ನಗರದಲ್ಲಿ ಮಂಗಳವಾರ ಸಂಜೆ (ಏ.16) ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಸುಮಾರು 18 ಲಕ್ಷ ಮತದಾರರಿದ್ದಾರೆ. ಕಳೆದ ಬಾರಿ ಸುಮಾರು ಶೇ.70 ರಷ್ಟು ಮತದಾನವಾಗಿತ್ತು. ಈ ಬಾರಿಯ ಮತದಾನ ಪ್ರಮಾಣ ಹೆಚ್ಚು ಆಗಬೇಕೆಂಬ ಗುರಿ ಇಟ್ಟುಕೊಂಡು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ನಮ್ಮ ಮತ ನಮ್ಮ ಹಕ್ಕು ಆಗಿದ್ದು ಅದನ್ನು ಕಡ್ಡಾಯವಾಗಿ ಚಲಾಯಿಸಬೇಕು. ಮತದಾನ ಪ್ರಕ್ರಿಯೆಯಿಂದ ಯಾರೂ ಸಹ ದೂರ ಉಳಿಯಬಾರದು. ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲರೂ ಶ್ರಮಿಸಬೇಕು ಎಂದರು.

ಪ್ರತಿಜ್ಞಾ ವಿಧಿ ಸ್ವೀಕಾರ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ : ಕೊಪ್ಪಳ ನಗರದ ಗಂಜ್ ವೃತ್ತದಿಂದ ಅಶೋಕ ವೃತ್ತದವರೆಗೆ ಹಾಗೂ ಗಡಿಯಾರ ಕಂಬ ವೃತ್ತದಿಂದ ಅಶೋಕ ವೃತ್ತದವರೆಗೆ ಸೇರಿ ಎರಡು ತಂಡಗಳಿಂದ ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಲೈಟ್ ಮೆರವಣಿಗೆಯು ಸಾರ್ವಜನಿಕರ ಗಮನ ಸೆಳೆಯಿತು. ಈ ಜಾಥಾದಲ್ಲಿ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಜಾಗೃತಿಗೆ ಕೈಜೋಡಿಸಿದರು.

ಮತದಾನ ಜಾಗೃತಿಗೆ ಜಿಲ್ಲಾ ಸ್ವೀಪ್ ಸಮಿತಿಯ ಈ ವಿಶೇಷ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗಲಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ಸ್ವೀಪ್ ಐಕಾನ್ಸ್ ಡಾ.ಶಿವಕುಮಾರ್ ಮಾಲಿಪಾಟೀಲ್, ಪೂರ್ಣಿಮಾ, ರಮ್ಯಾ ಹಾಗೂ ಮಹೆಬೂಬ್ ಕಿಲ್ಲೆದಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಶಿಕ್ಷಕರರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!