ಕಲ್ಯಾಣ ಕರ್ನಾಟಕ ಉತ್ಸವ ಸಿದ್ಧತೆ ಕೈಗೊಳ್ಳಿ : ಎಡಿಸಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 6- ಭಾರತ ಆ.15 ರಂದು ಸ್ವಾತಂತ್ರ್ಯ ಪಡೆದರೆ, ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಗಳು ಸೆ.17ರಂದು ವಿಮೋಚನೆಗೊಂಡ ದಿನ. ಹಾಗಾಗಿ ಜಿಲ್ಲಾ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನವಾಗಿ ಆಚರಿಸಲಾಗುತ್ತಿದ್ದು, ಆಚರಣೆಯು ಹಬ್ಬದಂತಿರಬೇಕು, ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆ. ೧೭ ಹೈದ್ರಾಬಾದ್ ನ ನಿಜಾಮರಿಂದ ಹೈದ್ರಾಬಾದ್ ಕರ್ನಾಟಕ ಪ್ರದೇಶಗಳು ವಿಮುಕ್ತಿ ಪಡೆದ ದಿನವಾಗಿದ್ದು, ಇದನ್ನು ಸರ್ಕಾರದ ಸೂಚನೆಯಂತೆ ಕಲ್ಯಾಣ ಕರ್ನಾಟಕ ಉತ್ಸವ ದಿನವಾಗಿ ಆಚರಿಸಲಾಗುತ್ತಿದೆ. ಸೆ.೧೭ ರಂದು ಬೆಳಿಗ್ಗೆ ೦೯ ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನ ಮೈದಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದರು.

ಕಲ್ಯಾಣ ಕರ್ನಾಟಕ ಉತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸನ್ಮಾನ ಸಮಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಿತಿ, ವಿದ್ಯುತ್ ಸಮಿತಿ, ದೀಪಾಲಂಕಾರ ಸಮಿತಿ, ಲಘು ಉಪಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!