
ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅದ್ದೂರಿ ಆಚರಣೆ : ಎಡಿಸಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 8- ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 20ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 08ರಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಸಮಾರಂಭವನ್ನು ಆ.20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ವಿಶೇಷ ಉಪನ್ಯಾಸ ಜರುಗಲಿದೆ.
ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಆಚರಿಸುವಂತೆ ಇಲಾಖೆಗಳು ಕ್ರಮ ಕೈಗೊಳ್ಳಬೇಕು. ಶಿಷ್ಠಾಚಾರದಂತೆ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಹಾಗೂ ಮೆರವಣಿಗೆಗಾಗಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಆಗಮಿಸುವಂತೆ ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಈ ಸಭೆಯಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರದ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎ.ಬಸವರಾಜ, ಸಮಾಜದ ಮುಖಂಡರಾದ ಈರಣ್ಣ ಹುಲಿಗಿ, ಗಿರೀಶ ಬಿ., ಮಂಜಪ್ಪ, ರಮೇಶ, ರಾಘವೇಂದ್ರ, ಬಸವರಾಜ, ರಾಮಣ್ಣ ಸೇರಿದಂತೆ ಇನ್ನೂ ಪ್ರಮುಖರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.