2

ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮ ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ : ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 29- ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಗಸ್ಟ್ 28ರಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಪ್ಪಳ ಬ್ರ್ಯಾಂಡ್ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಗೆ ದೇಶಿಯ ಮತ್ತು ವಿದೇಶಿಯ ಪ್ರವಾಸಿಗರನ್ನು ಸೆಳೆಯುವ ಕೆಲಸವಾಗಬೇಕು. ಈ ಬಗ್ಗೆ ಜಿಲ್ಲೆಯ ಐತಿಹಾಸಿಕ ತಾಣಗಳನ್ನು ವೆಬ್ ಸೈಟ್ ಅಥವಾ ಆನ್‌ಲೈನ್ ಮೂಲಕ ಹೆಚ್ಚಿನ ಪ್ರಚಾರಪಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಸುಪ್ರಸಿದ್ಧ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನದ ಅಭಿವೃದ್ಧಿ, ಹಿರೇಬೇಣಕಲ್ ಗ್ರಾಮದ ಮೋರೆರ್ ಬೆಟ್ಟದ ಅಭಿವೃದ್ಧಿ, ಇಟಗಿಯ ಮಹಾದೇವ ದೇವಾಲಯ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ ಎಂದರು.

ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಗುರುತಿಸಬೇಕು ಹಾಗೂ ಅವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ರೂ. 100 ಕೋಟಿ ಅನುದಾನದಲ್ಲಿ ಅಂಜನಾದ್ರಿಯಲ್ಲಿ ಪ್ರವಾಸಿ ಮಂದಿರ ನಿರ್ಮಾಣ, ಶಾಪಿಂಗ್ ಕಾಂಪ್ಲೆಕ್ಸ್ ಶೌಚಾಲಯ ನಿರ್ಮಾಣ, ಪ್ರದಕ್ಷಿಣಾ ಪಥ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಎಲ್ಲಾ ಕಾಮಗಾರಿಗಳ ಪ್ರಗತಿಗೆ ವೇಗ ನೀಡಬೇಕು. ಇದರ ಜೊತೆಗೆ ಇತರೆ ಕಾಮಗಾರಿಗಳಿಗೆ ಸರ್ಕಾರವು ಮತ್ತೆ ರೂ. 100 ಕೋಟಿ ನೀಡಿದ್ದು, ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ, ಅನುಮೋದನೆ ಬಳಿಕ ಹೊಸ ಕಾಮಗಾರಿಗಳ ಅನುಷ್ಠಾನಕ್ಕಾಗಿ ಕ್ರಮ ವಹಿಸಬೇಕು. ಇದಲ್ಲದೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಹಾಗೂ ಕನಕಗಿರಿಯ ಕನಕಾಚಲಪತಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮತ್ತು ಒಂದು ಜಿಲ್ಲೆ-ಒಂದು ತಾಣ ಯೋಜನೆ ಅಡಿಯಲ್ಲಿ ಶ್ರೀ ಇಟಗಿ ಮಹಾದೇವ ದೇವಾಲಯದ ಸಮಗ್ರ ಅಭಿವೃದ್ಧಿ ಮಾಡಬೇಕು.

ಹಿರೇಬೆಣಕಲ್ ಗ್ರಾಮದ ಮೋರೆರ ಬೆಟ್ಟದ ಸುತ್ತಮುತ್ತಲಿನ ಪ್ರದೇಶವು ಭಾರತೀಯ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತ, ಅರಣ್ಯ ಇಲಾಖೆಗೆ ಒಳಪಟ್ಟಿದ್ದು, ಈ ಬೆಟ್ಟದ ಅಭಿವೃದ್ಧಿ ದೃಷ್ಠಿಯಿಂದ ಈ ಬೆಟ್ಟಕ್ಕೆ ತೆರಳಲು ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದು. ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಸೈನೇಜ್ ಮತ್ತು ಹೋರ್ಡಿಂಗ್ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ನಿರ್ಮಾಣ ಹಾಗೂ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪಾಧಿಕಾರದ ಆಯುಕ್ತರಾದ ಕೆ.ರಂಗನಾಥ, ಕೊಪ್ಪಳ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗರಾಜ ಸೇರಿದಂತೆ, ಪೊಲೀಸ್ ಇಲಾಖೆಯ ಅಧೀಕ್ಷಕರು, ಅರಣ್ಯ ಇಲಾಖೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು ಹಾಗೂ ಕಾಮಗಾರಿಗಳ ಅನುಷ್ಠಾನ ಏಜೆನ್ಸಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!