ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಪ್ರಶಾಂತ್ ಕುಮಾರ್ ಮಿಶ್ರಾ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 31- ಆಗಸ್ಟ್ 15 ರಂದು ನಡೆಯುವ 78 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸಂಭ್ರಮದಿಂದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ಕಾರ್ಯಕ್ರಮವು ನಗರದ ವಿಮ್ಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ವಿವಿಧ ಸಮಿತಿಗಳನ್ನೊಳಗೊಂಡ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಆ.15 ರಂದು ಬೆಳಿಗ್ಗೆ 8.30 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದ ಬಳಿ ಬೃಹತ್ ಧ್ವಜಾರೋಹಣಾ ನಡೆಯಲಿದೆ. ನಂತರ 8.45 ಗಂಟೆಗೆ ವಿಮ್ಸ್ ಬಳಿಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಗುವುದು. ಬಳಿಕ ಬೆಳಿಗ್ಗೆ 09 ಗಂಟೆಗೆ ನಗರದ ವಿಮ್ಸ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಈ ಬಾರಿ ಕಂದಾಯ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ವೇದಿಕೆ ಸಿದ್ದತೆ, ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಪೊಲೀಸ್, ಶಾಲಾ ವಿದ್ಯಾರ್ಥಿಗಳ ತಂಡಗಳನ್ನೊಳಗೊಂಡಂತೆ ಕವಾಯತು ಅತ್ಯುತ್ತಮವಾಗಿ ನಡೆಸಲು ಪೂರ್ವಭಾವಿ ತರಬೇತಿ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿ, ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಶ್ಯಾಮಿಯಾನಾ, ಆಸನದ ವ್ಯವಸ್ಥೆ, ನುರಿತ ವೈದ್ಯರೊಂದಿಗೆ ತುರ್ತು ಚಿಕಿತ್ಸಾ ಅಂಬ್ಯುಲನ್ಸ್ ಹಾಗೂ ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಸ್ವಚ್ಛತೆ ನಿರ್ವಹಿಸಬೇಕು. ನಗರದ ವಿಮ್ಸ್ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಮಹಾಪಾಲಿಕೆ ಆಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ದೀಪಾಲಂಕಾರ, ಇನ್ನಿತರೆ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಿಡಿಪಿಐ ಅಧಿಕಾರಿಗಳು ಸಮನ್ವಯತೆಯಿಂದ ಕ್ರಮ ಕೈಗೊಳ್ಳಬೇಕು ಎಂದರು.

ಶಾಲಾ-ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಸನ್ಮಾನಿತರಿಗಾಗಿ ಪ್ರತ್ಯೇಕವಾಗಿ ನಿಗದಿತ ಆಸನದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸ್ವಾತಂತ್ರ್ಯೋತ್ಸವ ದಿನಾಚರಣೆಯ ದಿನ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿತ ಸ್ಥಾನಗಳಲ್ಲಿ ಉಪಸ್ಥಿತರಿದ್ದು, ಶಿಸ್ತಿನಿಂದ ತಮ್ಮ ಕಾರ್ಯ ನಿರ್ವಹಿಸಬೇಕು. ಒಟ್ಟಾರೆಯಾಗಿ ರಾಷ್ಟೀಯ ಹಬ್ಬವಾದ ಸ್ವಾತಂತ್ರೊö್ಯÃತ್ಸವ ಸಮಾರಂಭವನ್ನು ಆಸಕ್ತಿಯಿಂದ ಆಚರಿಸಿ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಲಘು-ಉಪಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧ್ವನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್, ಎಎಸ್ಪಿ ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!