ಕಲ್ಯಾಣ ಕರ್ನಾಟಕ ಉತ್ಸವ ದಿನ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 6- ಹೈದ್ರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲ್ಪಡುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸಾರ್ವಜನಿಕರನ್ನುದ್ದೇಶಿಸಿ ಜಿಲ್ಲಾ ಉಸ್ತುವಾರಿ ಸಚಿವರು ಸಂದೇಶ ನೀಡಲಿದ್ದಾರೆ. ಅಂದು ಜಿಲ್ಲೆಯ ಎಲ್ಲ ಸರ್ಕಾರಿ ಅರೇಸರ್ಕಾರಿ ಕಚೇರಿಗಳಲ್ಲಿ ಮಹನಿಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ತಮ್ಮ ತಮ್ಮ ಇಲಾಖೆಯಲ್ಲಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದ ನಂತರ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದು ತಿಳಿಸಿದರು.
ದಿನಾಚರಣೆ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಜಿಲ್ಲಾ ಕೇಂದ್ರದಲ್ಲಿನ ಪ್ರಮುಖ ರಸ್ತೆಗಳು, ವೃತ್ತಗಳನ್ನು ಅಂದು ಅಲಂಕೃತಗೊಳಿಸಬೇಕು. ಕ್ರೀಡಾಂಗಣದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರೀಡಾಂಗಣದಲ್ಲಿ ಅಗತ್ಯ ಏರ್ಪಾಡು ಮಾಡಬೇಕು ಎಂದು ಸೂಚನೆ ನೀಡಿದರು.
ಅಂದು ಜಿಲ್ಲಾಡಳಿತದ ಭವನ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿಶೇಷ ದೀಪಾಲಂಕಾರ ಮಾಡಬೇಕು ಎಂದು ಎಲ್ಲ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಸಿದ್ದಪಡಿಸಿ ವಿತರಿಸಬೇಕು. ಎಲ್ಲ ಕಾರ್ಯಕ್ರಮಗಳು ಸಮಯಕ್ಕನುಸಾರ ನಡೆಯಬೇಕು. ಪರೆಡ್‌ನಲ್ಲಿ ವಿವಿಧ ತಂಡಗಳು ಮತ್ತು ಶಾಲಾ ವಿದ್ಯಾರ್ಥಿಗಳು ಶಿಸ್ತುಬದ್ದವಾಗಿ ಪಾಲ್ಗೊಳ್ಳಲು ಈಗಿನಿಂದಲೇ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಬಾರದು. ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಅತ್ಯಂತ ಶಿಸ್ತು ಸಂಯಮದಿಂದ ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಅಧಿಕಾರಿಗಳಿಗೆ ಸೂಚನೆ : ಯಾವುದೇ ರಾಷ್ಟ್ರೀಯ ಹಬ್ಬಗಳಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ದಾಯ ಹಾಜರಾಗಬೇಕು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅನುಮತಿಯಿಲ್ಲದೇ ಗೈರು ಹಾಜರಾದಲ್ಲಿ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ತಮ್ಮ ತಮ್ಮ ಕಚೇರಿಯ ಸಿಬ್ನಂದಿಯೊAದಿಗೆ ಅಧಿಕಾರಿಗಳು ಹಾಜರಾಗಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಇ ಬಾಲಕೃಷ್ಣ ಅವರು ಮಾತನಾಡಿ, ಸಭೆಯಲ್ಲಿ ಆಯಾ ಇಲಾಖೆಗಳಿಗೆ ಕೆಲಸ ಹಂಚಿಕೆ ಮಾಡಿದಂತೆ ಎಲ್ಲ ಕಾರ್ಯಗಳಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲಸ ಹಂಚಿಕೆ ಮಾಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ವಿವೇಕಾನಂದ ಪಿ., ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಾರದ ಶರಣಪ್ಪ ಮುದಗಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಪ್ರಭುಲಿಂಗ ಎಸ್.ತಳಿಕೆರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಶಂಕರ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ.ಎಸ್, ಹೊಸಪೇಟೆಯ ತಹಶೀಲ್ದಾರರಾದ ಶೃತಿ.ಎಂ.ಎA, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ರಂಗಣ್ಣನವರ ಸೇರಿದಂತೆ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.