ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ : ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 4- ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 04ರಂದು ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಸೆಪ್ಟೆಂಬರ್ 17ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮತ್ತು ಬೆಳಿಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಎರಡೂ ಕಾರ್ಯಕ್ರಮಗಳಿಗೆ ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಪರೆಡ್‌ನಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತಿ ಸಮಯದಲ್ಲಿ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಉಪಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳು ಕ್ರಮ ವಹಿಸಬೇಕು ಎಂದರು.

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಿಗೆ ಆದ್ಯತೆ ನೀಡಲು ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಕಾಲೇಜುಗಳ ಮಕ್ಕಳಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಬಸ್ ಸೌಲಭ್ಯ ಕಲ್ಪಿಸಿ, ಮಕ್ಕಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಿ ಮತ್ತೆ ಬಸ್ ಮೂಲಕ ನಿಗದಿತ ಸ್ಥಳಕ್ಕೆ ಬಿಡಲು ಕ್ರಮ ವಹಿಸುವಂತೆ ಕ.ಕ.ರ.ಸಾ ಸಂಸ್ಥೆಯವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ ಕುಮಾರ್, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವೀಠ್ಠಲ್ ಜಾಬಗೌಡರ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!