DSC_0386

ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಿ : ಡಿಸಿ ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 26- ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜುಲೈ 29 ರಿಂದ ಆಗಸ್ಟ್ 14 ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ-2024-25 ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜುಲೈ 29 ರಿಂದ ಆಗಸ್ಟ್ 14 ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ-2024-25 ರ ಅಂಗವಾಗಿ ಚರ್ಚಿಸಲು ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿಯಾನಕ್ಕೂ ಒಂದೆರಡು ದಿನಗಳ ಮುನ್ನ ಕಾರ್ಯಕ್ರಮದ ಕುರಿತು ಗ್ರಾಮಗಳಲ್ಲಿ ಧ್ವನಿವರ್ಧಕಗಳ ಮೂಲಕ, ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ವಾಹನಗಳ ಮೂಲಕ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು ಭಾಗವಹಿಸುವಂತೆ ಕ್ರಮ ವಹಿಸಬೇಕು.

ನಗರ ಪ್ರದೇಶಗಳಲ್ಲಿ ವಾರ್ಡ್ ಸದಸ್ಯರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಕಾರ್ಯಕ್ರಮದಲ್ಲ ಸಕ್ರಿಯವಾಗಿ ಭಾಗವಹಿಸುವಂತೆ ಕ್ರಮ ವಹಿಸಬೇಕು. ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿದ ಸಂದರ್ಭ ಸಮೀಕ್ಷಾ ತಂಡಕ್ಕೆ ಸಾರ್ವಜನಿಕರು ಸಹಕರಿಸುವಂತೆ ತಿಳುವಳಿಕೆ ಮೂಡಿಸಬೇಕು. ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕುಷ್ಠರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಕಾರ್ಯಕ್ರಮದ ಅವಧಿಯಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಆಯಾ ಗ್ರಾಮದ ಜನರಿಗೆ ರೋಗದ ಬಗ್ಗೆ ಅರಿವು ಮೂಡಿಸಲು ಜಾಥಾ ಮುಖಾಂತರ ಆರೋಗ್ಯ ಶಿಕ್ಷಣ ನೀಡಬೇಕು. ಆರೋಗ್ಯ ಕಾರ್ಯಕರ್ತರು ಮಕ್ಕಳ ತಪಾಸಣೆಗೆ ಶಾಲೆಗೆ ಬಂದಾಗ ಸಹಕರಿಸಬೇಕು. ಸಾರ್ವಜನಿಕರು ಹಾಗೂ ಅಧಿಕಾರಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆ, ಆಶ್ರಮ ಶಾಲೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿದಾಗ, ಆಶ್ರಮ ಶಾಲೆ ಹಾಗೂ ವಸತಿ ಶಾಲೆಯ ಮೇಲ್ವಿಚಾರಕರು ಸಹಕರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರಿರುವ ತಾಲ್ಲೂಕು, ಗ್ರಾಮಗಳನ್ನು ಗುರುತಿಸಿ, ಅವುಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಬಾಧಿತರಿಗೆ ಸೂಕ್ತ ಚಿಕಿತ್ಸೆ, ಔಷಧೋಪಚಾರಕ್ಕೆ ಕ್ರಮ ವಹಿಸಬೇಕು. ಕುಷ್ಠರೋಗದ ಲಕ್ಷಣಗಳು ಹಾಗೂ ಸರ್ಕಾರದಿಂದ ಸಿಗುವ ಉಚಿತ ಚಿಕಿತ್ಸೆಯ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಬೇಕು. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆಯಾಗಿ ಆರಂಭಿಕ ಲಕ್ಷಣಗಳಿಗೆ ಸೂಕ್ತ ತಪಾಸಣೆ ಮೂಲಕ ಅಗತ್ಯ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ತಿಳುವಳಿಕೆ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎಚ್.ಪ್ರಕಾಶ ಅವರು ಮಾತನಾಡಿ, ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನದಲ್ಲಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ಶಂಕಿತ ಕುಷ್ಠರೋಗ ಪ್ರಕರಣಗಳ ಗುರುತಿಸಲು ಆಶಾ ಕಾರ್ಯಕರ್ತೆಯರಿಗೆ ಸಲಹೆಗಳನ್ನು ನೀಡಲಾಗಿದೆ. 2023-24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 161 ಪ್ರಕರಣಗಳು ಪತ್ತೆಯಾಗಿವೆ.

ಪ್ರಕರಣಗಳನ್ನು ಪತ್ತೆ ಹಚ್ಚಿ, ಮುಂದೆ ಉಂಟಾಗಬಹುದಾದ ವೈಕಲ್ಯತೆಯನ್ನು, ಗಂಭೀರ ಸಮಸ್ಯೆಯನ್ನು ತಡೆಯುವುದು, ಸಮುದಾಯಗಳಿಗೆ ರೋಗ ಹರಡದಂತೆ ತಡೆಯುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಅಭಿಯಾನದ ಕುರಿತು ಬ್ಲಾಕ್ ಲೆವೆಲ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಕಾರ್ಯಕರ್ತರಿಗೆ ಜಾಗೃತಿ ತರಬೇತಿ ನೀಡಲಾಗಿದೆ ಎಂದು ಅಭಿಯಾನಕ್ಕೆ ಕೈಗೊಂಡ ಕ್ರಮ ಹಾಗೂ ಕ್ರಿಯಾ ಯೋಜನೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ತಾಯಿ ಮರಣ ಪರಿಶೀಲನಾ ಸಭೆ : ತಾಯಿ ಮರಣ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಬೇರೆ ಜಿಲ್ಲೆಗಳಿಂದ ಕೊನೆಯ ಹಂತದಲ್ಲಿ ನಮ್ಮ ಜಿಲ್ಲಾಸ್ಪತ್ರೆಗೆ ದಾಖಲಾಗುವ ಹೆರಿಗೆ ಪ್ರಕರಣಗಳಲ್ಲಿ ತಾಯಿ ಮರಣ ಹೊಂದಿದ ಪ್ರಕರಣಗಳಲ್ಲಿ ಕಂಡುಕೊಂಡ ವೈದ್ಯಕೀಯ ಅಂಶಗಳನ್ನು ಪಟ್ಟಿ ಮಾಡಿ, ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ವಿವರವಾದ ಪತ್ರವನ್ನು ಬರೆದು ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಯಾವುದೇ ಗರ್ಭಿಣಿ ಗಂಭೀರ ಆರೋಗ್ಯ ಸಮಸ್ಯೆಯಲ್ಲೂ ಆಸ್ಪತ್ರೆಗೆ ದಾಖಲಾಗಲು ಹಿಂದೇಟು ಹಾಕಿದಾಗ ಸಂಬಂಧಿಸಿದ ಆಶಾ, ಪಿಎಚ್‌ಸಿ ವೈದ್ಯರು ಗರ್ಭಿಣಿ ಹಾಗೂ ಆಕೆಯ ಕುಟುಂಬದವರಿಗೆ ಸೂಕ್ತ ತಿಳುವಳಿಕೆ ನೀಡುವುದರ ಮೂಲಕ ಮನವೊಲಿಸಿ ಅಗತ್ಯ ವೈದ್ಯಕೀಯ ಸೌಲಭ್ಯಕ್ಕೆ ಶಿಫಾರಸ್ಸು ಮಾಡಬೇಕು. ಶಿಫಾರಸ್ಸು ಮಾಡಿದ ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಡಿಎಸ್‌ಒ ಡಾ.ನಂದಕುಮಾರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್., ಡಿಟಿಒ ಡಾ.ಶಶಿಧರ ಎ., ಡಿಎಲ್‌ಒ ಡಾ.ಪ್ರಕಾಶ ಎಚ್. ಸಿಎಂಒ ಡಾ.ಈಶ್ವರ ಸವಡಿ, ಕಿಮ್ಸ್ ಎಚ್‌ಒಡಿ ಡಾ.ನಾರಾಯಣ, ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!