
ಬ್ರಹ್ಮಶ್ರೀ ನಾರಾಯಣ ಗುರು ಅವರ ಆದರ್ಶ ತತ್ವ ಪಾಲಿಸೋಣ : ಮೇಯರ್ ಮುಲ್ಲಂಗಿ ನಂದೀಶ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 20- ಆಡಂಭರ ಜೀವನಕ್ಕೆ ಒತ್ತು ನೀಡದೇ ಸರಳ ಜೀವನ ನಡೆಸಲು ಬ್ರಹ್ಮಶ್ರೀ ನಾರಾಯಣ ಗುರು ಅವರ ಆದರ್ಶ-ತತ್ವಗಳನ್ನು ಪಾಲಿಸೋಣ ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಅವರು ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು ಎನ್ನುವ ಸಾರವನ್ನು ಜನ ಸಾಮಾನ್ಯರಿಗೆ ತಿಳಿಸುತ್ತಾ, ಸಕಲರಲ್ಲಿಯೂ ಸಾಮರಸ್ಯ ಭಾವನೆ ಮೂಡಿಸಿದವರು ಎಂದು ತಿಳಿಸಿದರು.
ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಮಾಡಲು ಪಣತೊಟ್ಟಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರು, ಸಾರ್ವಜನಿಕರನ್ನು ಅಜ್ಞಾನದಿಂದ ಜ್ಞಾನದೆಡೆಗೆ ನಡೆಸಿ, ಸ್ವಸ್ಥ ಸಮಾಜ ನಿರ್ಮಾಣ ಗುರಿ ಹೊಂದಿದ್ದರು ಎಂದು ಹೇಳಿದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ನಾರಾಯಣ ಗುರು ಅವರು ಹಿಂದುಳಿದ, ದೀನ ದಲಿತರ ರುವಾರಿ ಹಾಗೂ ಮೂಡ ನಂಬಿಕೆ, ಜೀತ ಪದ್ಧತಿ, ದೇವದಾಸಿ ಪದ್ಧತಿ, ಸತಿ ಸಹಗಮನ ಪದ್ಧತಿ ಸೇರಿದಂತೆ ಅನೇಕ ಸಾಮಾಜಿಕ ಶೋಷಣೆಗಳ ವಿರುದ್ಧ ಧ್ವನಿ ಎತ್ತಿದವರು. ಅವರ ಕಾರ್ಯ ಸಾಧನೆ ಶ್ಲಾಘನೀಯ ಎಂದು ಹೇಳಿದರು.
ಬಳ್ಳಾರಿಯ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಭಾಷ ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಹಾನ್ ಚೇತನರಾದ ಬ್ರಹ್ಮಶ್ರೀ ನಾರಾಯಣ ಗುರು ಅವರು ಜ್ಞಾನದ ಮಾರ್ಗ ಅನುಸರಿಸಿ, ಸಮಾಜದ ಏಳಿಗೆಗಾಗಿ ಶ್ರಮಪಟ್ಟವರು. ಇಂದಿನ ಯುವ ಸಮೂಹವು ಬ್ರಹ್ಮಶ್ರೀ ನಾರಾಯಣ ಗುರು ಅವರ ಸದ್ಗುಣಗಳನ್ನು ಅನುಸರಿಸುತ್ತಾ, ಸಮ-ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಬಳ್ಳಾರಿಯ ಸಾಯಿಶೃತಿ ಅವರ ವಚನ ಸಂಗೀತವು ಕಾರ್ಯಕ್ರಮದಲ್ಲಿ ಸಂಗೀತ ಕಡಲಲ್ಲಿ ತೇಲಿಸಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಆರ್ಯ ಈಡಿಗ ಗೌನ ಮಹಾಜನ ಸಭಾದ ಜಿಲ್ಲಾಧ್ಯಕ್ಷ ಹೆಚ್.ಆರ್ ಶ್ರೀನಾಥ ಸೇರಿದಂತೆ ಸಮಾಜದ ಮುಖಂಡರು, ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.