ಡೆಂಗ್ಯೂ ಪರೀಕ್ಷೆಗಾಗಿ ನಿಗದಿತ ದರಕ್ಕಿಂತಲೂ ಹೆಚ್ಚಿನ ಮೊತ್ತ ವಸುಲಿ

ಖಾಸಗಿ ಲ್ಯಾಬ್ ಮೇಲೆ ಕ್ರಮಕ್ಕ ಸಚಿವ ತಂಗಡಗಿ ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ 07- ಜಿಲ್ಲೆಯಲ್ಲಿ ಡೆಂಗ್ಯೂ ಪರೀಕ್ಷೆಗಾಗಿ ನಿಗದಿತ ದರಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಪಡೆಯುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ತೊಂದರೆ ಉಂಟಾಗುತ್ತಿದೆ. ಡೆಂಗ್ಯೂ ಪತ್ತೆ ಮಾಡುವ ಖಾಸಗಿ ಲ್ಯಾಬ್ಗಳಿಗೆ ಸರ್ಕಾರವು ನಿಗದಿಪಡಿಸಿರುವ ದರ ಮತ್ತು ಮಾರ್ಗಸೂಚಿಗಳನ್ನು ನೀಡಿ, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲುವಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಸೂಚನೆ ನೀಡಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲಾ ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಬಡವರಿಂದ ಹಣ ಸುಲಿಗೆ ಯಾಗದಂತೆ ಎಚ್ಚರ ವಹಿಸಬೇಕು,  ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತ ಪಡೆಯುವ ಲ್ಯಾಬ್ಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಜಿಲ್ಲೆಯ ಕುಕನೂರು, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕುಗಳಲ್ಲಿ ಮಂಜೂರಾಗಿರುವ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಹತ್ತು ಹಲವಾರು ಕಾರ್ಯಕ್ರಮಗಳು, ಯೋಜನೆಗಳು ಜಾರಿಯಲ್ಲಿವೆ. ಆದರೆ, ಜಿಲ್ಲೆಯಲ್ಲಿ ಕೆಲ ಮಕ್ಕಳ ಹಾಜರಾತಿ ಕಡಿಮೆ ಇದೆ. ಈ ಬಗ್ಗೆ ಆಯಾ ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಶಾಲೆಗೆ ಬಾರದೇ ಇರುವ ಮಕ್ಕಳ ಮನೆಗೆ ಭೇಟಿ ನೀಡುವಂತಾಗಬೇಕು ಹಾಗೂ ಮಕ್ಕಳ ಮತ್ತು ಅವರ ಪಾಲಕರ ಮನವಲಿಸಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಪ್ರಯತ್ನ ಮಾಡಬೇಕು.

ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಮಕ್ಕಳಿಗೆ ಹೆಚ್ಚುವರಿ ತರಬೇತಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ ವಿನೂತನ ಕಲಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೇರೆ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ರೀತಿ ಕೊಪ್ಪಳ ಜಿಲ್ಲೆಯಲ್ಲಿ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೆ, ಮಾಹಿತಿ ನೀಡಿ. ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ತಮಗೆ ನೀಡಿದ ಕಾಲಮಿತಿಯಲ್ಲಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು ಕೆಡಿಪಿ ಸಭೆಗೆ ಗೈರಾಗದೇ ಸ್ಪಷ್ಟ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಹೇಳಿದರು.

ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಕೊಪ್ಪಳ ಶಾಸಕ ಕಎ, ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ ಆಹಾರ ಇಲಾಖೆ ಉಪನಿರ್ದೇಶಕಿ ರೇಷ್ಮಾ ಹಾನಗಲ್, ಕೊಪ್ಪಳ ಜಿಲ್ಲಾ ಮಟ್ಟದ ಕೆಡಿಪಿ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.‌

 

 

 

Leave a Reply

Your email address will not be published. Required fields are marked *

error: Content is protected !!