2c136fae-be38-4577-97e1-318669006cc9

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ನೌಕರರ ಪಾಲ್ಗೊಳ್ಳುವಿಕೆಗೆ ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 4- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ನೌಕರರ ಪಾಲ್ಗೊಳ್ಳುವಿಕೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆ ಆಚರಿಸುವ ಕುರಿತುಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 04ರಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಯ ನಡೆಸಿ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯನ್ನು ಜಿಲ್ಲೆಯ ಎಲ್ಲಾ ಇಲ್ಲಾಖೆಗಳ ಸಹಭಾಗಿತ್ವದೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸೊಂಪೂರ ಹೆದ್ದಾರಿಯಿಂದ ಮುನಿರಾಬಾದ್ ಡ್ಯಾಂ ರಾಷ್ಟ್ರೀಯಾ ಹೆದ್ದಾರಿವರೆಗೆ ಹಮ್ಮಿಕೊಳ್ಳಲಾಗುತ್ತಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ತುರ್ತು ಕರ್ತವ್ಯದಲ್ಲಿರುವವರನ್ನು ಹೊರತು ಪಡಿಸಿ, ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಅಲ್ಲದೇ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ವಿಶೇಷವಾಗಿ ತಾಲ್ಲೂಕುವಾರು ಸರ್ಕಾರದ ವಿವಿಧ ಯೋಜನೆಗಳು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೂ ಸಹ ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯನ್ನು ಅರ್ಥಪೂರ್ಣವಾಗಿ ಮತ್ತು ಮಾದರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಮಾನವ ಸರಪಳಿ ರಚನೆಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯ ಮಹತ್ವವನ್ನು ಬಿಂಬಿಸುವ ಚಿತ್ರಗಳನ್ನು, ಸಂವಿಧಾನ ಪುಸ್ತಕದ ಚಿತ್ರಣವನ್ನು, ಪ್ರಸ್ಥಾವನೆ ಕಾರ್ಯಕ್ರಮ ಮತ್ತು ನಗರದ ಹೃದಯ ಭಾಗದ ಅಶೋಕ ವೃತ್ತದಲ್ಲಿ ಸಂವಿಧಾನದ ಪ್ರಸ್ತಾವನೆ ಬೋದನೆಗೆ ಸೂಕ್ತ ವೇದಿಕೆ ನಿರ್ಮಾಣಕ್ಕೆ ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯ ಸೊಂಪೂರ ಹೆದ್ದಾರಿಯಿಂದ ಮುನಿರಾಬಾದ್ ಡ್ಯಾಂ ರಾಷ್ಟ್ರೀಯಾ ಹೆದ್ದಾರಿವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಿರುವ ಮಾನವ ಸರಪಳಿಯು ಸುಮಾರು 55 ಕಿ.ಮೀ ಉದ್ದವಿದೆ. ಈ ವ್ಯಾಪ್ತಿಯಲ್ಲಿ ಸುಮಾರು 20 ಗ್ರಾ.ಪಂ.ಗಳು ಬರಲಿವೆ. ಮಾನವ ಸರಪಳಿ ನಿರ್ಮಾಣಕ್ಕೆ ಒಂದು ಮೀಟರ್‌ಗೆ ಒಬ್ಬರಂತೆ 55 ರಿಂದ 60 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಮಾನವ ಸರಪಳಿ ನಿರ್ಮಾಣಕ್ಕೆ 100 ಮೀಟರ್ ಮತ್ತು ಒಂದು ಕಿ.ಮೀ.ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ ಕುಮಾರ್, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವೀಠ್ಠಲ್ ಜಾಬಗೌಡರ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!