
ಇಂದು ಸಿದ್ದಾಪೂರದಲ್ಲಿ ಜನಸ್ಪಂದನಾ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ತಾಲ್ಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮವನ್ನು ಆಗಸ್ಟ್ 06ರ ಮಂಗಳವಾರದಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಅಧಿಕಾರಿಗಳು ಕಡ್ಡಾಯ ಹಾಜರಾಗಲು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚಿಸಿದ್ದಾರೆ.
ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ “ಜನ ಸ್ಪಂದನಾ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲು ತಿಳಿಸಿದಂತೆ, “ಜನ ಸ್ಪಂದನಾ” ಕಾರ್ಯಕ್ರಮವನ್ನು ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಎಪಿಎಂಸಿ ಆವರಣದಲ್ಲಿ ಆಗಸ್ಟ್ 06ರಂದು ಬೆಳೆಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಆಯೋಜಿಸಲಾಗಿರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ಸಭೆಗೆ ಜಿಲ್ಲೆಯ ತಾಲ್ಲೂಕುವಾರು ಹಾಗೂ ಕಾರಟಗಿ ತಾಲ್ಲೂಕಿನ ಹೋಬಳಿವಾರು ಮಾಹಿತಿಯೊಂದಿಗೆ ಹಾಜರಾಗಬೇಕು.
ಈ “ಜನ ಸ್ಪಂದನಾ” ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.