WhatsApp Image 2024-07-27 at 11.13.41 AM

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 27- ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಅವರು ಇಂದು, ಕಂಪ್ಲಿಯ ಕೋಟೆ ಪ್ರದೇಶದ ಬಳಿಯ ಪ್ರವಾಹ ಹಿನ್ನಲೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ನದಿಭಾಗ ಗ್ರಾಮದ ಜನರು ನದಿಪಾತ್ರಕ್ಕೆ ತೆರಳಬಾರದು ಎಂದು ಅವರು ಹೇಳಿದರು.

ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು. ಕಂಪ್ಲಿ ಮತ್ತು ಗಂಗಾವತಿ ಸಂಪರ್ಕ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯವಾಗಿ ಬುಕ್ಕಸಾಗರ ಸೇತುವೆ ಮೂಲಕ ಸಂಚರಿಸಬಹುದು ಎಂದರು.

ನೂತನ ಸೇತುವೆ ನಿರ್ಮಾಣದ ಕುರಿತು ಸ್ಥಳೀಯ ಶಾಸಕರ ಜೊತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಕಂಪ್ಲಿಯಲ್ಲಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಪಂ ವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನದಿಪಾತ್ರದ ಬಳಿ ಪೊಲೀಸರನ್ನು ನಿಯೋಜಿಸಿದೆ. ಯಾರೂ ನದಿಪಾತ್ರಕ್ಕೆ ತೆರಳಬಾರದು. ತುರ್ತು ಸಂದರ್ಭಕ್ಕೆ ತಾಲ್ಲೂಕು ಆಡಳಿತ ಅಥವಾ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ: ನದಿ ಪಾತ್ರ, ದಂಡೆ ಮತ್ತು ನದಿಯ ಅಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ಜತನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಬಳಿಕ ಕಂಪ್ಲಿ ಪಟ್ಟಣದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಡಿವೈಎಸ್ಪಿ ಗೋಖಲೆ, ತಹಶೀಲ್ದಾರ ಶಿವರಾಜ್, ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!