
ಕಂದಾಯ ಇಲಾಖೆಯ ದಾಖಲೆ ಡಿಜಿಟಲೀಕರಣ
ಬಳ್ಳಾರಿ ಜಿಲ್ಲೆ ಮೊದಲ ಸ್ಥಾನ
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೦೮- ರಾಜ್ಯದಲ್ಲಿಯೇ ಕಂದಾಯ ಇಲಾಖೆ ದಾಖಲೆಗಳನ್ನು ಡಿಜಿಟಲೀಕರಣ ಮಾಡುವಲ್ಲಿ ಬಳ್ಳಾರಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಗುರುವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಂದಾಯ ಸಚಿವರ ಇಚ್ಛಾಶಕ್ತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಅಭಿಲೇಖಾಲಯದಲ್ಲಿ ಹಳೇ ಕಡತಗಳ ಪಟ್ಟಿ ಮತ್ತು ಸೂಚ್ಯಂಕ ಕಾರ್ಯ ಕೈಗೆತ್ತಿಕೊಂಡಿದ್ದು, ಸರ್ಕಾರದ ವೆಬ್ಸೈಟ್ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲೀಕರಣ ಮಾಡಲಾಗುತ್ತಿದೆ. ಈವರೆಗೆ ಒಟ್ಟು 146063 ಕಡತಗಳನ್ನು ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಕಂದಾಯ ಗ್ರಾಮ:
ಜಿಲ್ಲೆಯಲ್ಲಿ ಒಟ್ಟು 73 ಹೊಸ ಕಂದಾಯ ಗ್ರಾಮಗಳನ್ನಾಗಿ ಪರಿರ್ವತಿಸಲು ಗುರುತಿಸಲಾಗಿದ್ದು, ಈ ಪೈಕಿ 06 ತಿಂಗಳ ಅವಧಿಯಲ್ಲಿ 14 ಪ್ರಾಥಮಿಕ ಅಧಿಸೂಚನೆ ಮತ್ತು 07 ಅಂತಿಮ ಅಧಿಸೂಚನೆ ಹೊರಡಿಸಲು ಸರ್ಕಾರಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.