IMG-20240622-WA0003

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ‌ ನೇಮಕ‌; ‘ಮಹಾ’ ಸರ್ಕಾರಕ್ಕೆ ಪತ್ರ

ಕರುನಾಡ ಬೆಳಗು ಸುದ್ದಿ

ಬೆಂಗಳೂರು: ಜೂ.21. ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಹೀಗಾಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಈ ಹಿಂದೆಯೂ ಕೇರಳ‌ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವ‌ರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಡ್ಡಾಯವಾಗಿ ಕನ್ನಡ ಭಾಷಾ ಮಾಧ್ಯಮದಲ್ಲಿ‌ ಪಾಠ ಮಾಡುವ ಶಿಕ್ಷಕರನ್ನೇ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರ ಸರಕಾರ
ನೇಮಿಸಬೇಕು. ಹೀಗಾಗಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಗಡಿಭಾಗದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆ ಉಳಿವಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದರು.‌

ವಿಶ್ವ‌ ಸಮ್ಮೇಳನ‌ದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ನಮಗೂ ಇರಾದೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!